ಸಿದ್ದಾಪುರ, ಜು. ೧೮: ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ಔಷಧಿ ಅಭಾವ ಹಾಗೂ ಪ್ರಯೋಗಾಲಯದ ಅವ್ಯವಸ್ಥೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಕಾರ್ಯಕರ್ತರು ಆಸ್ಪತ್ರೆಯ ವೈದ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಕಾರ್ಯದರ್ಶಿ ಸುರೇಶ್ ನೆಲ್ಲಿಕಲ್ ಮಾತನಾಡಿ, ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರವು ಸುಮಾರು ಹತ್ತು ಗ್ರಾಮಗಳ ಬಡ ಹಾಗೂ ಕೂಲಿ ಕಾರ್ಮಿಕರಿಗೆ ಪ್ರಮುಖ ಆರೋಗ್ಯ ಸೇವಾ ಕೇಂದ್ರವಾಗಿದೆ. ಆದರೆ ಆಸ್ಪತ್ರೆಯಲ್ಲಿನ ಮೂಲಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳ ಕೊರತೆಯಿಂದ ಸಾರ್ವಜನಿಕರು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವಂತಾಗಿದೆ ಎಂದು ಆರೋಪಿಸಿದರು.
ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿಂದ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ವೈದ್ಯರು ಬರೆದ ಔಷಧಿಗಳನ್ನು ಹೊರಗಿನ ಮೆಡಿಕಲ್ಸ್ನಿಂದ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಯೋಗಾಲಯಗಳು ನಿರಂತರ ವಿದ್ಯುತ್ ವ್ಯವಸ್ಥೆಯ ಕೊರತೆಯಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿನಿತ್ಯ ಸಾವಿರಾರು ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುತ್ತಿದ್ದರೂ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷö್ಯ ವಹಿಸಿದೆ. ಕೂಡಲೇ ಸಮಸ್ಯೆಗಳನ್ನು ಪರಿಹರಿಸದಿದ್ದರೆ ಕರವೇ ಸ್ವಾಭಿಮಾನಿ ಬಣದ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಮನವಿ ಸ್ವೀಕರಿಸಿದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರೇವಣ್ಣ ಪ್ರತಿಕ್ರಿಯಿಸಿ, ಆಸ್ಪತ್ರೆಯ ಬಹುತೇಕ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಔಷಧಿ ಖರೀದಿಸಲು ಕೆಲ ಪ್ರಕ್ರಿಯೆಯಿಂದ ವಿಳಂಬ ಉಂಟಾಗುತ್ತಿದೆ. ಆಸ್ಪತ್ರೆಯಲ್ಲಿ ಅಗತ್ಯ ವೈದ್ಯರು ಲಭ್ಯವಿದ್ದು, ಪ್ರಯೋಗಾಲಯಗಳಿಗೆ ಹೊಸ ಯುಪಿಎಸ್ ಅಳವಡಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಎಕ್ಸ್-ರೇ ಯಂತ್ರಗಳ ಮೇಲ್ದರ್ಜೆಗೇರಿಸುವ ಕುರಿತು ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭ ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಸಲಹೆಗಾರ ಸಜಿಲ್ ಕುಮಾರ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ನಂದಿನಿ, ನೆಲ್ಯಹುದಿಕೇರಿ ಘಟಕದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ನಂದ, ಪ್ರಮುಖರಾದ ಶಶಿ, ರಾಧಾಕೃಷ್ಣ, ಯಮುನ, ರವಿ, ಗಣೇಶ್, ಅಪ್ಪುಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.