ವೀರಾಜಪೇಟೆ, ಜು. ೧೯: ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂ.ಕಾA ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ವ್ಯವಸ್ಥಾಪಕ ರೆ. ಫಾ. ಮದಲೈ ಮುತ್ತು ಮಾತನಾಡಿ, ವಿದ್ಯಾರ್ಥಿಗಳು ಎರಡು ವರ್ಷಗಳ ಸ್ನಾತಕೋತ್ತರ ವ್ಯಾಸಂಗವನ್ನು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಪೂರ್ಣಗೊಳಿಸಿರುವುದು ಶ್ಲಾಘನೀಯ. ಉನ್ನತ ಶಿಕ್ಷಣವನ್ನು ಮುಂದುವರಿಸುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ, ಉತ್ತಮ ಉದ್ಯೋಗವನ್ನು ಪಡೆದು ಸಮಾಜಕ್ಕೆ ಮಾದರಿಯಾಗಬೇಕು. ಜೀವನದಲ್ಲಿ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಂತೆ ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಜೀವನದ ಮೌಲ್ಯಗಳನ್ನೂ ಅರ್ಥಮಾಡಿಕೊಳ್ಳಬೇಕು. ಸ್ನಾತಕೋತ್ತರ ಶಿಕ್ಷಣದಲ್ಲಿ ಪಡೆದ ಜ್ಞಾನವನ್ನು ಸಮಾಜದ ಒಳಿತಿಗೆ ಬಳಸಬೇಕು. ಪರೋಪಕಾರದ ಮನೋಭಾವ ಬೆಳೆಸಿಕೊಂಡು ಆದರ್ಶ ಪ್ರಜೆಗಳಾಗಿ ಬೆಳೆಯಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಬಿ.ಡಿ. ಹೇಮ, ಕೆ.ಪಿ. ದೃಶ್ಯ, ಬಿ.ಎನ್. ಶಾಂತಿಭೂಷಣ್, ಪೂಜಾ, ತಮ್ಮಯ್ಯ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಎಂ.ಕಾA ವಿದ್ಯಾರ್ಥಿಗಳು ಉಪಸ್ಥಿತರಿದ್ದರು.