ಗೋಣಿಕೊಪ್ಪ, ಜು. ೨೦: ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪ್ರತಿಯೊಬ್ಬ ನಾಗರಿಕರೂ ಕಾನೂನುಗಳ ಬಗ್ಗೆ ಕನಿಷ್ಟ ಮಟ್ಟದ ಅರಿವು ಹೊಂದಿರುವುದು ಅಗತ್ಯ ಎಂದು ಗೋಣಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿ ಕಾಳೇಗೌಡ ಹೇಳಿದರು.

ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕೈಕೇರಿ ಗ್ರಾಮದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಕಳ್ಳತನ, ಅಕ್ರಮ ಚಟುವಟಿಕೆಗಳು, ಸೈಬರ್ ಅಪರಾಧಗಳು, ಸಂಚಾರ ನಿಯಮಗಳ ಪಾಲನೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯ ಪ್ರಮುಖ ಅಂಶಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಸಂದೇಹಾಸ್ಪದ ವ್ಯಕ್ತಿಗಳು ಅಥವಾ ಅಕ್ರಮ ಚಟುವಟಿಕೆಗಳು ಕಂಡುಬAದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬಾಲ್ಯ ವಿವಾಹದಂತಹ ಪ್ರಕರಣಗಳನ್ನು ಮುಚ್ಚಿಡದೆ ಸಂಬAಧಿತ ಇಲಾಖೆ ಅಥವಾ ಪೊಲೀಸರ ಗಮನಕ್ಕೆ ತರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರೆ ನೀಡಿದ ಅವರು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವುದನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಸಾರ್ವಜನಿಕರ ಅಹವಾಲು ಗಳನ್ನು ಆಲಿಸಿದ ಕಾಳೇಗೌಡ, ಪೊಲೀಸ್ ಇಲಾಖೆ ಸದಾ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ಸಮಸ್ಯೆ ಎದುರಾದರೂ ನಿರ್ಭಯವಾಗಿ ಪೊಲೀಸರನ್ನು ಸಂಪರ್ಕಿಸಬಹುದು ಎಂದು ಮನವಿ ಮಾಡಿದರು.

ಈ ಸಂದರ್ಭ ಅಪರಾಧ ವಿಭಾಗದ ಉಪನಿರೀಕ್ಷಕ ವೆಂಕಟೇಶ್, ಗ್ರಾಮದ ಪ್ರಮುಖರಾದ ಕುಪ್ಪಂಡ ಗಿರೀಶ್ ಪೂವಣ್ಣ, ಚೀಯಕ್‌ಪೂವಂಡ ಸುಬ್ರಮಣಿ, ಸಾಬು, ಜಮ್ಮಡ ಹ್ಯಾರಿ, ಜಮ್ಮಡ ನಾಣಯ್ಯ, ಜಮ್ಮಡ ನಿಖಿಲ್ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.