ಶನಿವಾರಸಂತೆ, ಜು. ೨೧: ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಅರಿವು ಮೂಡಿಸುವ ಹಾಗೂ ಪೊಲೀಸ್ - ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ತೆರೆದ ಮನೆ ಕಾರ್ಯಕ್ರಮದ ಅಂಗವಾಗಿ ಶನಿವಾರಸಂತೆಯ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ೫ ನೇ ತರಗತಿಯ ವಿದ್ಯಾರ್ಥಿಗಳು ಪ್ರಾಂಶುಪಾಲ ರೆ.ಫಾ. ಜಿ.ಬಿ.ಥೋಮಸ್ ನೇತೃತ್ವದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿದರು.
ಠಾಣೆಯಲ್ಲಿ ವೃತ್ತ ನಿರೀಕ್ಷಕ ಜಿ.ಕೃಷ್ಣರಾಜ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ವಿವಿಧ ವಿಭಾಗಗಳು, ದೂರು ಸ್ವೀಕಾರ ಪ್ರಕ್ರಿಯೆ, ಪೊಲೀಸ್ ಸಿಬ್ಬಂದಿಯ ಕರ್ತವ್ಯಗಳು, ಸಾರ್ವಜನಿಕರಿಗೆ ನೀಡುವ ಸೇವೆ ಹಾಗೂ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರದ ಕುರಿತು ಸಮಗ್ರ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳುತ್ತಾ, ಪೊಲೀಸ್ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಉಪಯುಕ್ತ ಮಾಹಿತಿ ಪಡೆದುಕೊಂಡರು.