ವೀರಾಜಪೇಟೆ, ಜು. ೨೨: ಅಮ್ಮತ್ತಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಶನಿವಾರ ಕಾರ್ಯಕ್ರಮವನ್ನು ಆಚರಿಸಲಾಯಿತು.
ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಮಾದಕ ವಸ್ತುಗಳ ಅಪಾಯದ ಬಗ್ಗೆ ಅರಿವು ಮೂಡಿಸುವುದು ಮತ್ತು ಅವುಗಳಿಂದಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಅನಾಹುತಗಳ ಬಗ್ಗೆ ತಿಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಕಾರ್ಯಕ್ರಮಕ್ಕೆ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕೆ.ಎಲ್. ರುಕ್ಮಿಣಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಕುಟುಂಬ ಹಾಳಾಗುತ್ತದೆ. ಓದಿನ ಮೇಲೆ ಪರಿಣಾಮ ಬೀರುತ್ತದೆ ಮತ್ತು ಭವಿಷ್ಯ ಹಾಳಾಗುತ್ತದೆ ಎಂದರು.
ಆರೋಗ್ಯ ಕಾರ್ಯಕರ್ತೆ ರಂಜಿನಿ ಅವರು ಮಾದಕ ವಸ್ತುಗಳಿಂದ ದೇಹಕ್ಕೆ ಆಗುವ ಹಾನಿ, ಕಾನೂನು ಕ್ರಮಗಳ ಬಗ್ಗೆ ಮಕ್ಕಳಿಗೆ ಮಾಹಿತಿಯಿತ್ತರು. ಉತ್ತಮ ಆಹಾರ, ವ್ಯಾಯಾಮ ಮತ್ತು ಸ್ವಚ್ಛತೆಯ ಮಹತ್ವದ ಬಗ್ಗೆ ತಿಳಿಸಿದರು.
ಪ್ರಬಾರ ಮುಖ್ಯ ಶಿಕ್ಷಕಿ ಎಂ.ಟಿ. ಅಕ್ಕಮ್ಮ ಮಾತನಾಡಿ, ಪ್ರತಿ ತಿಂಗಳು ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಮಕ್ಕಳಲ್ಲಿ ಜವಾಬ್ದಾರಿಯುತ ಪ್ರಜ್ಞೆ ಮೂಡುತ್ತದೆ ಎಂದು ಹೇಳಿದರು. ಶಾಲೆಯ ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಮಾದಕ ವಸ್ತುಗಳ ವಿರುದ್ಧ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು.