ಮಡಿಕೇರಿ, ಜು. ೨೪: ರಾಷ್ಟç ರಾಜಧಾನಿ ನವದೆಹಲಿಯಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯ ನೆಪದಲ್ಲಿ ಕಾಂಗ್ರೆಸ್ ಹಾಗೂ ಕಾಕ್ರೋಚ್ ಜನತಾ ಪಕ್ಷ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಹೊರಟಿದೆ ಎಂದು ಆರೋಪಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಅಲ್ಲದೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಇದರಿಂದ ಕೆಲಕಾಲ ನಗರದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಮೊದಲು ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬಿಜೆಪಿ ಕಾರ್ಯಕರ್ತರು ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ನಗರದ ಗಣಪತಿ ಬೀದಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮೊದಲೇ ಪೊಲೀಸರಿಗೆ ಈ ಬಗ್ಗೆ ಸುಳಿವಿದ್ದ ಹಿನ್ನೆಲೆ ಪೊಲೀಸರು ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಪ್ರತಿರೋಧವೊಡ್ಡಿದ ಕಾರ್ಯಕರ್ತರು ಬ್ಯಾರಿಕೇಡ್ ಅನ್ನು ತಳ್ಳಿ ನುಗ್ಗಲು ಯತ್ನಿಸಿದರು. ಈ ಸಂದರ್ಭ ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದು ಪೊಲೀಸ್ ವಾಹನ ಹಾಗೂ ಸರಕಾರಿ ಬಸ್‌ನಲ್ಲಿ ಮೈತ್ರಿ ಹಾಲ್‌ಗೆ ಕರೆದೊಯ್ದು ಬಳಿಕ ಬಿಡುಗಡೆ ಮಾಡಿದರು.

ಪ್ರತಿಭಟನೆ ಹಿನ್ನೆಲೆ ಬಸ್ ನಿಲ್ದಾಣದಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣ ನಿಷೇಧಿಸಲಾಗಿತ್ತು. ಸಂಚಾರ ವ್ಯವಸ್ಥೆಯಲ್ಲಿಯೂ ಬದಲಾವಣೆ ತರಲಾಗಿತ್ತು. ಡಿವೈಎಸ್‌ಪಿ ಸೂರಜ್ ನೇತೃತ್ವದಲ್ಲಿ ೫೦ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಡ್ರೋನ್, ಕ್ಯಾಮರ ಕಣ್ಗಾವಲನ್ನು ಇರಿಸಲಾಗಿತ್ತು.

ಈ ವೇಳೆ ಮಾತನಾಡಿದ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೀಟ್ ಪರೀಕ್ಷೆಯನ್ನು ನಡೆಸುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆ ಬೆಳಕಿಗೆ ಬಂದ ತಕ್ಷಣ ಪರೀಕ್ಷೆ ರದ್ದುಪಡಿಸಿ ಮರುಪರೀಕ್ಷೆ ನಡೆಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕರ್ನಾಟಕದಲ್ಲಿಯೂ ಕೆಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆಯಾದಾಗ ಸಂಬAಧಿಸಿದ ಸಚಿವರು ರಾಜೀನಾಮೆ ನೀಡಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ವಿದೇಶಿ ಶಕ್ತಿಗಳ ನೆರವಿನೊಂದಿಗೆ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು. ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ. ವಿದೇಶಿ ಪ್ರಾಯೋಜಕತ್ವದಲ್ಲಿ ಸಿಜೆಪಿ ಹೋರಾಟ ನಡೆಸುತ್ತಿದ್ದು, ಇದೊಂದು ದೇಶದ್ರೋಹಿ ಸಂಘಟನೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ರಾಜಕೀಯ ಲಾಭ ಮಾಡಿಸಿಕೊಳ್ಳುವ ಯತ್ನ ಮಾಡುತ್ತಿದೆ. ಸಿಜೆಪಿಗೆ ಕಾಂಗ್ರೆಸ್ ಬೆಂಬಲ ನೀಡಿ ಕೇಂದ್ರದ ವಿರುದ್ಧ ಷಡ್ಯಂತ್ರ ರೂಪಿಸುತ್ತಿದೆ. ಕಾಂಗ್ರೆಸ್ ಪ್ರತಿಭಟನೆ ಉದ್ದೇಶವೇನು? ಬೇರೆ ದೇಶದಂತೆ ಸರಕಾರ ಬದಲಾವಣೆ ಮಾqಲು ಭಾರತದಲ್ಲಿ ಆಗುವುದಿಲ್ಲ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಎಂ.ಪಿ. ಸುನಿಲ್ ಸುಬ್ರಮಣಿ, ಎಸ್.ಜಿ. ಮೇದಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಿ.ಕೆ. ಲೋಕೇಶ್, ಜಿ.ಪಂ. ಮಾಜಿ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮನು ಮಂಜುನಾಥ್, ಡೀನ್ ಬೋಪಣ್ಣ, ವಕ್ತಾರ ತಳೂರು ಕಿಶೋರ್ ಕುಮಾರ್, ಬಿ.ಕೆ. ಅರುಣ್ ಕುಮಾರ್, ನಗರಸಭಾಧ್ಯಕ್ಷೆ ಕಲಾವತಿ, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಸಜಿಲ್ ಕೃಷ್ಣ, ರಮೇಶ್ ಹೊಳ್ಳ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ವೀರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಪ್ರಧಾನ ಕಾರ್ಯದರ್ಶಿ ಕುಟ್ಟಂಡ ಅಜಿತ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಪ್ರಮುಖರಾದ ಯಮುನಾ ಚಂಗಪ್ಪ, ಬಲ್ಲಾರಂಡ ಮಣಿ ಉತ್ತಪ್ಪ, ಎಡಿಕೇರಿ ಪ್ರಸನ್ನ ಸೇರಿದಂತೆ ಇನ್ನಿತರರು ಹಾಜರಿದ್ದರು.

ಕಾಂಗ್ರೆಸ್ ಕಚೇರಿಯಲ್ಲೂ ಭದ್ರತೆ

ಬಿಜೆಪಿ ಮುತ್ತಿಗೆ ಹಾಕುವ ಪ್ರಯತ್ನದ ಹಿನ್ನೆಲೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಯೂ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಕಚೇರಿಯ ಪ್ರವೇಶದ್ವಾರದಲ್ಲಿ ಬ್ಯಾರಿಕೇಡ್ ಅಳವಡಿಸಿ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಹೆಚ್ಚಿನ ಪೊಲೀಸರು ಕೂಡ ನಿಯೋಜನೆಗೊಂಡಿದ್ದರು.