ಪೊನ್ನಂಪೇಟೆ, ಜು. ೨೪: ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ಪದವಿಪೂರ್ವ ಕಾಲೇಜುಗಳ ೨೦೨೬-೨೦೨೭ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ಗೋಣಿಕೊಪ್ಪಲಿನ ಕಾವೇರಿ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್. ಎಸ್. ಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎರಡೂ ತಾಲೂಕುಗಳ ಪದವಿಪೂರ್ವ ಕಾಲೇಜುಗಳು ಯಾವ ಯಾವ ಕ್ರೀಡೆಗಳನ್ನು ಆಯೋಜಿಸಬೇಕು ಎಂಬ ಬಗ್ಗೆ ಚರ್ಚಿಸಿದರು. ಕ್ರೀಡಾಕೂಟವನ್ನು ಶಿಸ್ತುಬದ್ಧವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪನಿರ್ದೇಶಕ ಗಣಪತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಕೊಡಗು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹಂಡ್ರAಗಿ ನಾಗರಾಜ್, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗೇಶ್, ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹರೀಶ್ ತಮನ್ಕರ್, ಪಾಲಿಬೆಟ್ಟ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶೈನಾ, ಲಯನ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಲತಾ ಸೇರಿದಂತೆ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಜಶ್ಮಿ ಸ್ವಾಗತಿಸಿದರು. ಎಂ.ಟಿ. ಸಂತೋಷ್ ಅವರು ವಂದಿಸಿದರು. ಕುಸುಮ್ ಅವರು ಕಾರ್ಯಕ್ರಮ ನಿರೂಪಿಸಿದರು.