ವೀರಾಜಪೇಟೆ, ಜು. ೨೪: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ವೀರಾಜಪೇಟೆಯಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ, ಯುವ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಸಹಯೋಗದಲ್ಲಿ ಗಡಿಯಾರ ಕಂಬದ ಬಳಿ ನಡೆದ ಪ್ರತಿಭಟನೆಯಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಉಗ್ರಗಾಮಿಗಳೆಂದು ಬಿಂಬಿಸಿರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಬೆಳವಣಿಗೆ ಎಂದು ಪೊನ್ನಣ್ಣ ಆರೋಪಿಸಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಲವು ವರ್ಷಗಳಿಂದ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ. ಪ್ರತಿಭಟನಾನಿರತರನ್ನು ಹತ್ತಿಕ್ಕಲು ಬಲಪ್ರಯೋಗ ನಡೆಸಿರುವುದು ಖಂಡನೀಯ ಎಂದರು.

ದೆಹಲಿಯಲ್ಲಿ ನಡೆದ ಪ್ರತಿಭಟನೆಯನ್ನು ಕಣ್ಣಾರೆ ಕಂಡಿದ್ದು, ಸಾವಿರಾರು ವಿದ್ಯಾರ್ಥಿಗಳು ನ್ಯಾಯಯುತ ಹೋರಾಟ ನಡೆಸುತ್ತಿದ್ದರು. ಆದರೆ ಪ್ರತಿಭಟನೆ ಹತ್ತಿಕ್ಕಲು ಟಿಯರ್ ಗ್ಯಾಸ್, ಲಾಠಿ ಚಾರ್ಜ್ ಸೇರಿದಂತೆ ದಮನಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಿಂದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸಿಗೆ ಧಕ್ಕೆ ಉಂಟಾಗಿದೆ ಎಂದು ಹೇಳಿದರು.

ಅಗತ್ಯ ವಸ್ತುಗಳು, ಅಡುಗೆ ಅನಿಲ ಹಾಗೂ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ. ಈ ಎಲ್ಲ ವಿಚಾರಗಳನ್ನು ಖಂಡಿಸಿ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮವು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಗಿದೆ. ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಮಾತನಾಡಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಕಾಂಗ್ರೆಸ್ ಮುಖಂಡ ನೆರವಂಡ ಉಮೇಶ್ ಸೇರಿದಂತೆ ಹಲವು ನಾಯಕರು ಮಾತನಾಡಿದರು. ಪ್ರತಿಭಟನೆಯ ಸಂದರ್ಭ ಕೆಲಕಾಲ ರಸ್ತೆ ತಡೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಡಿವೈಎಸ್‌ಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಯನ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಮತೀನ್ ನಗರ ಅಧ್ಯಕ್ಷ ಮಾಳೇಟಿರ ಬೋಪಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್, ಜಿಲ್ಲಾ ವಕ್ತಾರ ತೆನ್ನಿರ ಮೈನ, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ, ಮಾಜಿ ಸದಸ್ಯರಾದ ಶಬರೀಶ್ ಶೆಟ್ಟಿ, ರಜನಿಕಾಂತ್, ರಾಜೇಶ್, ಅಗಸ್ಟಿನ್ ಬೆನ್ನಿ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಅಬ್ದಲ್ ಸಲಾಂ, ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಮುಕ್ಕಾಟಿರ ಕಾವೇರಮ್ಮ, ಹಿರಿಯ ಪ್ರಮುಖರಾದ ತೋರೆರ ಪೊನ್ನಕ್ಕಿ ಉಪಸ್ಥಿತರಿದ್ದರು.