ವೀರಾಜಪೇಟೆ, ಜು. ೨೫: ದೆಹಲಿಯ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿ-ಯುವಜನರಿಗೆ ಐಕ್ಯತಾ ಬೆಂಬಲ ಸೂಚಿಸಿ ಡಿ.ವೈ.ಎಫ್.ಐ. ಕೊಡಗು ಜಿಲ್ಲಾ ಸಮಿತಿ ವತಿಯಿಂದ ವೀರಾಜಪೇಟೆ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ಕೊಡಗು ಜಿಲ್ಲಾ ಖಜಾಂಚಿ ಸಾದಿಕ್ ಎ.ಎಚ್., ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಕೂಡಲೇ ನಿಲ್ಲಿಸಬೇಕು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ನೀಟ್ ಪರೀಕ್ಷಾ ವ್ಯವಸ್ಥೆಯನ್ನು ರದ್ದುಪಡಿಸಬೇಕು. ಮೃತರಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ೧ ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಡಿವೈಎಫ್‌ಐ ಜಿಲ್ಲಾ ಮುಖಂಡರಾದ ಎನ್.ಕೆ ಅನಿಲ್, ಕೆ.ಎಸ್ ರತೀಶ್, ಖಾಲಿದ್, ಆದಿವಾಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ರಮೇಶ್, ಮುಖಂಡರಾದ ಸೀತಾ, ಅಶೋಕ್, ಜನವಾಧಿ ಮಹಿಳಾ ಸಂಘಟನೆ ಜಿಲ್ಲಾ ಸಂಚಾಲಕಿ ಪದ್ಮಿನಿ ಶ್ರೀಧರ್ ಹಾಗೂ ಅಡ್ವೋಕೇಟ್ ಕೆ.ವಿ. ಸುನಿಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.