ನಾಪೋಕ್ಲು, ಜು. ೨೬: ದೊಡ್ಡಪುಲಿಕೋಟು ಗ್ರಾಮ ಹಿತರಕ್ಷಣಾ ಸಮಿತಿ ಸಭೆ ದೊಡ್ಡಪುಲಿಕೋಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಿತಿ ಅಧ್ಯಕ್ಷ ಕರವಂಡ ಲವ ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಬಗ್ಗೆ ವಿಸ್ತಾರವಾಗಿ ಗ್ರಾಮಸ್ಥರ ಸಮ್ಮುಖದಲ್ಲಿ ಚರ್ಚಿಸಿ, ಸಮಸ್ಯೆಗಳ ಬಗ್ಗೆ ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರಿಗೆ ತಿಳಿಸಿ ಸಮಸ್ಯೆ ಸರಿಪಡಿಸಿಕೊಡುವಂತೆ ಮನವಿ ಮಾಡಲಾಯಿತು. ಮುಖ್ಯವಾಗಿ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶರತ್ ಪೂಣ್ಣಚ್ಚ, ಗ್ರಾಮಸ್ಥರ ಮನವಿಯನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಾಬಿ ಭೀಮಯ್ಯ, ಮಾಜಿ ಸದಸ್ಯರಾದ ಸುತನ್ ಸುಬ್ಬಯ್ಯ ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.