ಕೆ.ಎಂ. ಇಸ್ಮಾಯಿಲ್ ಕಂಡಕರೆ

ಮಡಿಕೇರಿ, ಜು. ೨೬: ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಪಡೆಯಲು ಮೊದಲ ಬಾರಿಗೆ ಶಾಸಕರಾದ ಹಲವು ಮಂದಿ ಹೈಕಮಾಂಡ್ ಮಟ್ಟದಲ್ಲಿ ತೀವ್ರ ಲಾಬಿ ನಡೆಸುತ್ತಿದ್ದಾರೆ.

೨೦೨೩ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ೩೮ ಮಂದಿ ಹೊಸಬರು ಶಾಸಕರಾಗಿ ಗೆಲುವು ಸಾಧಿಸಿದ್ದರು. ಆದರೆ ಸಿದ್ದರಾಮಯ್ಯ ಸರ್ಕಾರದಲ್ಲಿ ಹೊಸಬರಿಗೆ ಅವಕಾಶ ನೀಡಿರಲಿಲ್ಲ. ಇದೀಗ ಕಾಂಗ್ರೆಸ್ ಹೈಕಮಾಂಡ್ ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿದೆ. ಈ ತಿಂಗಳ ಅಂತ್ಯದೊಳಗೆ ಅಥವಾ ಆಗಸ್ಟ್ ಮೊದಲ ವಾರ ಸಂಪುಟ ವಿಸ್ತರಣೆ ನಡೆಯುವುದು ಖಚಿತವಾಗಿದ್ದು, ಪ್ರಥಮ ಬಾರಿಗೆ ಶಾಸಕರಾದ ಎ.ಎಸ್. ಪೊನ್ನಣ್ಣ ಹಾಗೂ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರ ಹೆಸರನ್ನು ರಾಜ್ಯ ನಾಯಕರು ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದಾರೆನ್ನಲಾಗಿದೆ. ಹಿರಿಯ ಶಾಸಕರು ಮತ್ತು ಕಳೆದ ಬಾರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾದವರಿಗೆ ಮತ್ತೊಮ್ಮೆ ಅವಕಾಶ ನೀಡುವುದು ಬಹುತೇಕ ಖಚಿತಗೊಂಡಿತ್ತು. ಆದರೆ ಕಳೆದ ವಾರ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸಲು ಸಿ.ಎಂ. ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆ.ಪಿ.ಸಿ.ಸಿ. ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರಾಜ್ಯ ನಾಯಕರು ತಯಾರಿಸಿದ್ದ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದರು. ಹೊಸ ನಾಯಕತ್ವ ಸೃಷ್ಟಿಸಲು ಹೊಸ ಮುಖಗಳಿಗೆ ಅವಕಾಶ ನೀಡಬೇಕೆಂದು ಹೇಳಿದ್ದರು. ಸಿ.ಎಂ. ಡಿ.ಕೆ. ಶಿವಕುಮಾರ್, ಮಾಜಿ ಸಿ.ಎಂ. ಸಿದ್ದರಾಮಯ್ಯ ಅವರು ಪ್ರಥಮ ಬಾರಿಗೆ ಶಾಸಕರಾದವರ ಪೈಕಿ ಎಎಸ್. ಪೊನ್ನಣ್ಣ ಹಾಗೂ ಶರತ್ ಬಚ್ಚೇಗೌಡ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲಾಗುವುದು ಎಂಬ ಚರ್ಚೆಗಳು ಮುನ್ನಲೆಗೆ ಬಂದ ದಿನಗಳಿಂದ ಎ.ಎಸ್. ಪೊನ್ನಣ್ಣ ಅವರ ಹೆಸರು ಮುಂಚೂಣಿಗೆ ಬಂದಿದೆ. ಎ.ಎಸ್. ಪೊನ್ನಣ್ಣ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರ ಕಾನೂನು ಸಲಹೆಗಾರರಾಗಿ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೂ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಅದಲ್ಲದೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಎ.ಎಸ್. ಪೊನ್ನಣ್ಣ ಅವರು ನಿಕಟ ಸಂಪರ್ಕವನ್ನು ಹೊಂದಿದ್ದಾರೆ. ಹೊಸಬರಿಗೆ ಅವಕಾಶ ನೀಡಲಾಗುವುದೆಂಬ ಚರ್ಚೆಗಳು ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತಿರುವಾಗ ಎ.ಎಸ್. ಪೊನ್ನಣ್ಣ ಅವರ ಹೆಸರು ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಅದಲ್ಲದೇ ಪ್ರಮುಖವಾಗಿ ಎ.ಎಸ್. ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಯಾಟ್ ಬೀಸುತ್ತಿದ್ದಾರೆ.

೧೩ ವರ್ಷಗಳ ಬಳಿಕ ಕೊಡಗಿಗೆ ಸಿಗುತ್ತಾ ಮಂತ್ರಿ ಭಾಗ್ಯ!

೨೦೧೨-೧೩ ರಲ್ಲಿ ಜಗದೀಶ್ ಶೆಟ್ಟರ್ ನೇತೃತ್ವ ಬಿಜೆಪಿ ಸರ್ಕಾರದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕೇವಲ ೧೦ ತಿಂಗಳ ಕಾಲ ಸಚಿವ ಸ್ಥಾನವನ್ನು ವಹಿಸಿದ್ದರು. ಇದಾದ ಬಳಿಕ ಕಾವೇರಿ ತವರಿಗೆ ಮಂತ್ರಿ ಭಾಗ್ಯ ಲಭಿಸಲೇ ಇಲ್ಲ. ೨೦೧೯ ರಿಂದ ೨೦೨೩ ರವರೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೇ ಗೆಲುವು ಸಾಧಿಸಿದ್ದರು. ಕೊಡಗಿಗೆ ಸಚಿವ ಸ್ಥಾನ ಸಿಗಲಿಲ್ಲ. ಕಳೆದ ೧೩ ವರ್ಷಗಳಿಂದ ಕೊಡಗಿಗೆ ಗೆಸ್ಟ್ ಉಸ್ತುವಾರಿಗಳೇ ಬರುತ್ತಿದ್ದಾರೆ. ಇದೀಗ ಕಾಂಗ್ರೆಸ್ ಹೈಕಮಾಂಡ್ ಪ್ರಥಮ ಬಾರಿಗೆ ಶಾಸಕರಾಗಿ ಗೆಲುವು ಸಾಧಿಸಿರುವ ಶಾಸಕರಿಗೆ ಸಚಿವ ಸ್ಥಾನ ನೀಡಲು ಒಲವು ತೋರಿದ್ದು, ಶಾಸಕ ಎ.ಎಸ್. ಪೊನ್ನಣ್ಣ ಅವರ ಹೆಸರು ಕೇಳಿ ಬರುತ್ತಿರುವುದು ನಿರೀಕ್ಷೆ ಮೂಡಿಸಿದೆ.