ಸಿದ್ದಾಪುರ, ಜು. ೨೯: ನೆಲ್ಯಹುದಿಕೇರಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ಶೀಘ್ರ ಕಾರ್ಯರೂಪಕ್ಕೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಳಗ) ವತಿಯಿಂದ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಕರವೇ ಜಿಲ್ಲಾ ಕಾರ್ಯದರ್ಶಿ ಸುರೇಶ್ ನೆಲ್ಲಿಕಲ್ ಮಾತನಾಡಿ, ನೆಲ್ಯಹುದಿಕೇರಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಬೆಟ್ಟದ ಕಾಡು ರಸ್ತೆಯ ಮೂಲಕ ಕಾವೇರಿ ನದಿಯಿಂದ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಮೂರು ವರ್ಷಗಳ ಹಿಂದೆ ಆರಂಭಿಸಲಾಗಿತ್ತು. ಆದರೆ ಇದುವರೆಗೆ ಯೋಜನೆ ಪೂರ್ಣಗೊಂಡು ಸಾರ್ವಜನಿಕರಿಗೆ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಗ್ರಾಮದ ಜನರ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುವಂತೆ ಸಂಬAಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಯೋಜನೆಯನ್ನು ಪೂರ್ಣಗೊಳಿಸಬೇಕೆಂದು ಮನವಿ ಮೂಲಕ ಆಗ್ರಹಿಸಲಾಗಿದೆ ಎಂದು ಅವರು ತಿಳಿಸಿದರು.
ಕರವೇ ಸ್ವಾಭಿಮಾನಿ ಬಳಗದ ಜಿಲ್ಲಾ ಸಲಹೆಗಾರ ಸಜಿಲ್ ಕುಮಾರ್, ನೆಲ್ಯಹುದಿಕೇರಿ ಘಟಕದ ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ರಶಾದ್, ಕಾರ್ಯದರ್ಶಿ ನಂದ ಹಾಗೂ ಪದಾಧಿಕಾರಿಗಳಾದ ರೆಜಿ, ಅಪ್ಪು, ಸಫೀಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.