ಮಡಿಕೇರಿ, ಜು. ೨೯: ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-೨೦೨೬ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ-ಸಾಹಸ ಪ್ರದರ್ಶಿಸಿದ ೬ ರಿಂದ ೧೮ ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾ. ೦೧-೦೮-೨೦೨೫ ರಿಂದ ೩೧-೦೭-೨೦೨೬ ರೊಳಗೆ ನಡೆದಿರುವ ಘಟನೆಯ ಆಧಾರದಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ. ೧೦ ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಇದೇ ಸಂದರ್ಭ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ ೫ ವರ್ಷಗಳ ಕಾಲ ಅತ್ಯುತ್ತಮ ಸೇವೆಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.೨೫ ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.೧ ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.
ಮಕ್ಕಳ ದಿನಾಚರಣೆ-೨೦೨೬ ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‌ಗೇಟ್ ಹತ್ತಿರ, ಮೈಸೂರು ರಸ್ತೆ ಮಡಿಕೇರಿ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ ಆ. ೨೦ರೊಳಗೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಕೋರಲಾಗಿದೆ. ದಿನಾಂಕದ ನಂತರ ಸಲ್ಲಿಸಿದ ಅರ್ಜಿಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ೦೮೨೭೨-೨೨೮೦೧೦, ೯೪೮೨೧೯೪೧೦೫ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ ಅವರು ತಿಳಿಸಿದ್ದಾರೆ.