ಸುಂಟಿಕೊಪ್ಪ, ಜು. ೩೦: ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೧೦೦ ಫಲಿತಾಂಶ ದಾಖಲಿಸಲು ಶ್ರಮಿಸಿದ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರಿಗೆ ಹಾಗೂ ಶಾಲೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಸಮಾಜಸೇವಕ ಹಾಗೂ ಗುತ್ತಿಗೆದಾರ ಇಸಾಕ್ ಖಾನ್ ಉದ್ಘಾಟಿಸಿ, ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್. ದಿವಾಕರ್, ಶೇ.೯೦ಕ್ಕಿಂತ ಹೆಚ್ಚು ಫಲಿತಾಂಶ ದಾಖಲಿಸುವ ಸರ್ಕಾರಿ ಶಾಲೆಗಳ ಶಿಕ್ಷಕರು ಹಾಗೂ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮವನ್ನು ಸಂಘಟನೆ ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ. ಕೊಡಗು ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಶೇ.೧೦೦ ಫಲಿತಾಂಶ ಸಾಧಿಸಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಇಸಾಕ್ ಖಾನ್ ಮಾತನಾಡಿ, ತಾನು ಈ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುವುದು ಹೆಮ್ಮೆಯ ವಿಷಯವಾಗಿದೆ. ಶಿಕ್ಷಕರ ಸಮರ್ಪಿತ ಸೇವೆಯೇ ಉತ್ತಮ ಫಲಿತಾಂಶಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿ ಉತ್ತಮ ನಾಗರಿಕರಾಗಿ ಬೆಳೆಯಬೇಕು ಎಂದು ಕರೆ ನೀಡಿದರು.

ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಮಧು ಮಾತನಾಡಿ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು, ಅನೇಕರು ಉನ್ನತ ಸರ್ಕಾರಿ ಹುದ್ದೆಗಳನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿಗಳು ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಅನುಸರಿಸಿ ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತ ಹೆಗ್ಗಡೆ ಮಾತನಾಡಿ, ಶಿಕ್ಷಕರ ಶ್ರಮವನ್ನು ಗುರುತಿಸಿ ಸನ್ಮಾನಿಸುವ ಇಂತಹ ಕಾರ್ಯಕ್ರಮಗಳು ಶಿಕ್ಷಣ ಕ್ಷೇತ್ರಕ್ಕೆ ಪ್ರೇರಣೆಯಾಗಿವೆ. ಮುಂದಿನ ವರ್ಷಗಳಲ್ಲೂ ಉತ್ತಮ ಫಲಿತಾಂಶ ದಾಖಲಿಸಲು ಶಾಲೆಯ ಶಿಕ್ಷಕ ವೃಂದ ಬದ್ಧವಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರಿಗೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಬಳಿಕ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದಿAದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್. ದಿವಾಕರ್ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮವನ್ನು ಶಿಕ್ಷಕ ಎನ್. ಪ್ರಕಾಶ್ ನಿರೂಪಿಸಿದರು. ಶಿಕ್ಷಕಿ ಚಿತ್ರ ಅವರು ಕಾರ್ಯಕ್ರಮದ ಕುರಿತು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.