ಸಿದ್ದಾಪುರ, ಜು. ೩೧: ಅಮ್ಮತ್ತಿ ಗ್ರಾಮ ಪಂಚಾಯಿತಿ ಹಾಗೂ ಪುಲಿಯೇರಿ-ಇಂಜಿಲಗೆರೆ ಗ್ರಾಮಸ್ಥರ ಜಂಟಿ ಆಶ್ರಯದಲ್ಲಿ ಇಂಜಿಲಗೆರೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಿತೀಶ್ ಎಂ.ಎಚ್. ಅವರ ನೇತೃತ್ವದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಮ್ಮತ್ತಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಶಾಂತ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಕ್ತದ ಕೊರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯವಂತರು ಸ್ವಯಂಪ್ರೇರಣೆಯಿAದ ರಕ್ತದಾನ ಮಾಡಿ ಅಗತ್ಯವಿರುವ ರೋಗಿಗಳ ಜೀವ ಉಳಿಸುವ ಸೇವೆಯಲ್ಲಿ ಭಾಗಿಯಾಗಬೇಕು ಎಂದು ಕರೆ ನೀಡಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ವಿಭಾಗದ ಮುಖ್ಯಸ್ಥ ಡಾ. ಕರುಂಬಯ್ಯ ಮಾತನಾಡಿ, ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ರಕ್ತದಾನ ಮಾಡುವುದು ಅತ್ಯುತ್ತಮ ಸಾಮಾಜಿಕ ಸೇವೆಯಾಗಿದೆ. ರಕ್ತದಾನ ಶಿಬಿರಗಳ ಮೂಲಕ ರಕ್ತದ ಕೊರತೆಯನ್ನು ನೀಗಿಸಲು ಸಾಧ್ಯವಾಗುತ್ತಿದ್ದು, ಜಿಲ್ಲಾ ಕೇಂದ್ರ ಆಸ್ಪತ್ರೆಯ ಸಹಯೋಗದಲ್ಲಿ ನಿರಂತರವಾಗಿ ರಕ್ತ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು. ಶಿಬಿರದ ನೇತೃತ್ವ ವಹಿಸಿದ್ದ ನಿತೀಶ್ ಎಂ.ಎಚ್. ಮಾತನಾಡಿ, ಗ್ರಾಮ ಪಂಚಾಯಿತಿ ಹಾಗೂ ಪುಲಿಯೇರಿ-ಇಂಜಿಲಗೆರೆ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ೩೩ ಮಂದಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ೬೦ಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಶಿಬಿರದ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಶಾಂತ, ಸಮಾಜಸೇವಕ ಸುಬೈರ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಿಬ್ಬಂದಿ ಪಂಚಾಕ್ಷರಿ, ಗ್ರಾಮದ ಪ್ರಮುಖರಾದ ಉಣ್ಣಿಕೃಷ್ಣನ್, ಸನು, ಅಂಗನವಾಡಿ ಕಾರ್ಯಕರ್ತೆ ಸಜಿನಿ ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.