ಮಡಿಕೇರಿ, ಆ. ೩ ಮೂರ್ನಾಡಿನ ಪದವಿ ಕಾಲೇಜಿನಲ್ಲಿ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಉಪನ್ಯಾಸವನ್ನು ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಏರ್ಪಡಿಸಲಾಗಿತ್ತು.
ಮಡಿಕೇರಿ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಸಿಬ್ಬಂದಿಯೊAದಿಗೆ ಕಾಲೇಜಿಗೆ ಆಗಮಿಸಿ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮದ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಇವರು ಸಮಾಜದಲ್ಲಿ ಬಳಕೆಯಲ್ಲಿರುವ ವಿವಿಧ ರೀತಿಯ ಮಾದಕ ದ್ರವ್ಯಗಳ ಪರಿಚಯವನ್ನು ಚಿತ್ರ ಸಮೇತ ಪಿಪಿಟಿ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ತೋರಿಸಿಕೊಟ್ಟರು. ಇಂತಹ ವಸ್ತುಗಳು ಎಲ್ಲಾದರೂ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿಯನ್ನು ವಿವಿಧ ರೀತಿಯಲ್ಲಿ ಹೇಗೆ ನೀಡಬಹುದು ಎಂಬುದನ್ನು ಕೂಡ ವಿವರಿಸಿದ್ದರು.
ವಿದ್ಯಾರ್ಥಿಗಳು ಪೊಲೀಸ್ ವ್ಯವಸ್ಥೆಯ ಬಗ್ಗೆ ಎಷ್ಟು ತಿಳಿದಿದ್ದಾರೆ ಎಂಬುದನ್ನು ತಿಳಿಯಲು ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. ಉತ್ತರಿಸಿದವರಿಗೆ ಪೊಲೀಸ್ ಇಲಾಖೆಯ ವತಿಯಿಂದ ಬಹುಮಾನವನ್ನು ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಕಲ್ಪನಾ ಸಾಮ್ರಾಟ್ ಮಾತನಾಡಿ, ಪೊಲೀಸ್ ಇಲಾಖೆಯ ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಉಪಯೋಗಕಾರಿ ಎಂದರು. ಕಾಲೇಜಿನ ಮಾದಕ ದ್ರವ್ಯ ನಿಷೇಧದಳದ ಅಧಿಕಾರಿ ವಿಲ್ಮಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.