ವೀರಾಜಪೇಟೆ, ಆ. ೫: ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿರಂತರ ಕೆಲಸದ ಒತ್ತಡದಲ್ಲಿರುವುದರಿಂದ ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ವೀರಾಜಪೇಟೆ ಡಿವೈಎಸ್‌ಪಿ ಮಹೇಶ್ ಕುಮಾರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೊಡಗು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಐಸಿಟಿಸಿ ಕೇಂದ್ರ, ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಗಾಗಿ ಪೊಲೀಸ್ ಠಾಣೆ ಸಭಾಂಗಣದಲ್ಲಿ ಸಮಗ್ರ ಆರೋಗ್ಯ ಜಾಗೃತಿ ಮತ್ತು ವೈದ್ಯಕೀಯ ತಪಾಸಣಾ ಶಿಬಿರ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿದ ಡಿವೈಎಸ್‌ಪಿ ಮಹೇಶ್ ಕುಮಾರ್ ಮಾತನಾಡಿ, ಪೊಲೀಸ್ ಸಿಬ್ಬಂದಿ ಇಲಾಖೆಗೆ ಎಷ್ಟು ಮುಖ್ಯವೋ, ತಮ್ಮ ಕುಟುಂಬಕ್ಕೂ ಅಷ್ಟೇ ಅಮೂಲ್ಯರಾಗಿದ್ದಾರೆ. ಆದ್ದರಿಂದ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಿಬಿರದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಹಾಗೂ ಸರ್ಕಾರಿ ಆಸ್ಪತ್ರೆಯ ವೈದ್ಯೆ ಡಾ. ಸೌಮ್ಯ ಆರೋಗ್ಯ ಜಾಗೃತಿ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ನಗರ ಠಾಣಾಧಿಕಾರಿ ಪ್ರಮೋದ್ ಕುಮಾರ್, ಗ್ರಾಮಾಂತರ ಠಾಣಾಧಿಕಾರಿ ಲತಾ, ಅಪರಾಧ ಪತ್ತೆ ವಿಭಾಗದ ಕಾವೇರಪ್ಪ ಹಾಗೂ ವಾಣಿಶ್ರೀ, ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಡಾ. ಅರ್ಚನ, ಡಾ. ಚೆಟ್ಟಿಯಪ್ಪ, ಡಾ. ಹರೀಶ್, ಡಾ. ವಿನೀಲ್ ಮತ್ತು ಡಾ. ಚಂದ್ರಶೇಖರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.