ವೀರಾಜಪೇಟೆ, ಆ. ೭: ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಜೆ. ಆನಂದ್ (೫೫) ಅವರು ಶುಕ್ರವಾರ ಬೆಳಿಗ್ಗೆ ಕರ್ತವ್ಯಕ್ಕೆ ಆಗಮಿಸುತ್ತಿದ್ದ ವೇಳೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂಲತಃ ತಲಕಾಡು ನಿವಾಸಿಯಾಗಿರುವ ಆನಂದ್ ಅವರು ಮೈಸೂರಿನಲ್ಲಿ ನೆಲೆಸಿದ್ದು, ಅಲ್ಲಿಂದಲೇ ದಿನನಿತ್ಯ ವಿರಾಜಪೇಟೆಗೆ ಬಂದು ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಿಗ್ಗೆ ವಾಡಿಕೆಯಂತೆ ಕರ್ತವ್ಯಕ್ಕೆ ಹಾಜರಾಗಲು ಮೈಸೂರಿನಿಂದ ವೀರಾಜಪೇಟೆಗೆ ಬಸ್‌ನಲ್ಲಿ ಪ್ರಯಾಣ ಬೆಳೆಸಿದ್ದರು.
ಬಸ್ ಇಲವಾಲ ಸಮೀಪಿಸುತ್ತಿದ್ದಂತೆ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪ್ರಯಾಣದ ವೇಳೆಯಲ್ಲೇ ಬಸ್‌ನಲ್ಲಿ ಹೃದಯಾಘಾತ ಸಂಭವಿಸಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಅಧಿಕಾರಿಯ ಅಕಾಲಿಕ ನಿಧನಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರ ಸಂಘ ಹಾಗೂ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಶೋಕ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರ ಶಿಕ್ಷಣ ಅಧಿಕಾರಿಯ ಅಕಾಲಿಕ ನಿಧನದ ಹಿನ್ನಲೆ ವೀರಾಜಪೇಟೆ ತಾಲೂಕು ವ್ಯಾಪ್ತಿಯ ಸರಕಾರಿ, ಅನುದಾನಿತ, ಅನುದಾನ ರಹಿತ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿತ್ತು.
ಸ್ಕೌಟ್ಸ್-ಗೈಡ್ಸ್ ಸಂತಾಪ
ಹೃದಯಾಘಾತದಿAದ ನಿಧನ ಹೊಂದಿದ ಶಾಲಾ ಶಿಕ್ಷಣ ಇಲಾಖೆಯ ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಜೆ. ಆನಂದ ಅವರ ನಿಧನಕ್ಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮಾಥ್ಯೂ ಸಂತಾಪ ವ್ಯಕ್ತಪಡಿಸಿದ್ದಾರೆ.