ನಾಪೋಕ್ಲು, ಆ. ೮: ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ ಸಮೀಕ್ಷೆ ಎಂದು ಎಲ್ಲಾ ಗ್ರಾಮ ಪಂಚಾಯಿತಿಗಳ ಮೂಲಕ ಆಕ್ಷೇಪಣೆ ಸಲ್ಲಿಸಲು ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ತೀರ್ಮಾನ ಕೈಗೊಳ್ಳಲಾಯಿತು.ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಜಿಲ್ಲಾಧಿಕಾರಿಗಳು ತಕ್ಷಣ ಕಂದಾಯ ಮತ್ತು ಅರಣ್ಯ ಇಲಾಖೆ ವತಿಯಿಂದ ಜಂಟಿ ಸರ್ವೆ ಮಾಡಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟು ಸ್ವಾಭಾವಿಕ ಅರಣ್ಯ ಮತ್ತು ಎಷ್ಟು ಕೃಷಿ ಭೂಮಿ ಇದೆ ಎಂಬುದನ್ನು ವಿಂಗಡಣೆ ಮಾಡಿ ವರದಿಯನ್ನು ಸರ್ಕಾರಕ್ಕೆ ಕೊಡುವಂತೆ ವ್ಯವಸ್ಥೆ ಕಲ್ಪಿಸುವುದು, ವರದಿ ತಯಾರಿಸುವಾಗ ಸ್ಥಳೀಯ ಗ್ರಾಮ ಪಂಚಾಯಿತಿಗಳ ಅಥವಾ ಜನರ ಅಭಿಪ್ರಾಯವನ್ನು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೆ ಪ್ರಜಾಪ್ರಭುತ್ವದ ವಿಕೇಂದ್ರೀಕರಣ ರೀತಿಗೆ ವಿರುದ್ಧವಾಗಿರಬಾರದು ಎಂದು ಸಭೆಯಲ್ಲಿ ಒತ್ತಾಯ ಕೇಳಿ ಬಂತು.

ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಗ್ರಾಮೀಣ ರಸ್ತೆಗಳು, ಸರ್ಕಾರಿ ಕಟ್ಟಡಗಳಿಗೆ ಮತ್ತು ಕೃಷಿಗೆ ಹಾನಿಯಾಗಿದ್ದು, ತಕ್ಷಣ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವರದಿ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸುವುದು ಹಾಗೂ ಎನ್‌ಡಿಆರ್‌ಎಫ್ ಅನುದಾನ ಪಡೆಯಲು ಪ್ರಯತ್ನಿಸುವುದು. ಯಾವುದೇ ಕಾರಣಕ್ಕೂ ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ ಆಗದಂತೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು.

ಜಲಜೀವನ್ ಮಿಷನ್ ಯೋಜನೆಗೆ ಸಂಬAಧಿಸಿದAತೆ ಗ್ರಾಮಗಳಲ್ಲಿ ಸಮರ್ಪಕವಾಗಿ ಕೆಲಸಕಾರ್ಯ ಆಗದೆ ಕಳಪೆ ಕೆಲಸ ಕಾರ್ಯಗಳು ನಡೆದಿವೆ.

ಸಮಯಕ್ಕೆ ಸರಿಯಾಗಿ ನಡೆಯದೆ ಇದರ ಬಗ್ಗೆ ಎಲ್ಲಾ ಗ್ರಾಮಗಳಿಗೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮತ್ತು ತಾಲೂಕು ಪಂಚಾಯಿತಿ ಆಡಳಿತ ಅಧಿಕಾರಿಗಳು ಜಂಟಿಯಾಗಿ ಸರ್ವೆ ಮಾಡಿ ತಕ್ಷಣ ಕೆಲಸ ಕಾರ್ಯಗಳನ್ನು ಮುಗಿಸುವುದಕ್ಕೆ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರು ಸಭೆಯಲ್ಲಿ ಒತ್ತಾಯಿಸಿದರು.

ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಉಪಾಧ್ಯಕ್ಷ ಕೆ.ಎಸ್. ಸತೀಶ್, ಜಿಲ್ಲಾ ಕಾರ್ಯದರ್ಶಿ ಉಮಾ ಪ್ರಭು, ಮಂಡಲ ಕಾರ್ಯದರ್ಶಿ ಡೀನ್ ಬೋಪಣ್ಣ, ಧನುಷ್, ಗ್ರಾಮಾಂತರ ಮಂಡಲದ ಪದಾಧಿಕಾರಿಗಳು ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರದ ಪ್ರಮುಖರು ಹಾಜರಿದ್ದರು.