ಚಿತ್ರ, ವರದಿ : ವಾಸು ಆಚಾರ್ಯ

ಸಿದ್ದಾಪುರ, ಆ. ೧೦: ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮ್ಮತ್ತಿ ಒಂಟಿಯAಗಡಿಯಲ್ಲಿ ರಸ್ತೆ ತಡೆ ಹಾಗೂ ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಕಣ್ಣಂಗಾಲ ಶಕ್ತಿ ಕೇಂದ್ರದ ಅಧ್ಯಕ್ಷ ಬೇರೆರ ರಂಜಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ಬೆಳಿಗ್ಗೆಯಿಂದ ಸುಮಾರು ಐದು ಗಂಟೆಗಳ ಕಾಲ ಮುಖ್ಯರಸ್ತೆಯಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಆನೆ-ಮಾನವ ಸಂಘರ್ಷ ತಡೆಗೆ ಶಾಶ್ವತ ಯೋಜನೆ ರೂಪಿಸಬೇಕು ಎಂದು ಸರ್ಕಾರ ಹಾಗೂ ಅರಣ್ಯ ಇಲಾಖೆಯನ್ನು ಒತ್ತಾಯಿಸಿದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸ್ಥಳಕ್ಕೆ ಆಗಮಿಸಬೇಕೆಂದು ಆಗ್ರಹಿಸಿ ಪ್ರತಿಭ ಟನಾಕಾರರು ಸರ್ಕಾರ ಮತ್ತು ಅರಣ್ಯ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ತಡೆಯಿಂದ ಅಮ್ಮತ್ತಿ ಒಂಟಿಯAಗಡಿ ಹಾಗೂ ವೀರಾಜಪೇಟೆ ಸಂಪರ್ಕಿಸುವ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ದಟ್ಟಣೆ ಉಂಟಾಯಿತು.

ಶಾಶ್ವತ ಯೋಜನೆ ರೂಪಿಸಿ : ಬೋಪಯ್ಯ

ಪ್ರತಿಭಟನಾ ಸಭೆಯಲ್ಲಿ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಮಾತನಾಡಿ, ಕೊಡಗಿನಲ್ಲಿ ಕಳೆದ ಹಲವು ವರ್ಷಗಳಿಂದ ಆನೆ-ಮಾನವ ಸಂಘರ್ಷ ನಿರಂತರವಾಗಿ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಶಾಶ್ವತ ಪರಿಹಾರ ರೂಪಿಸುವಲ್ಲಿ ನಿರ್ಲಕ್ಷö್ಯ ವಹಿಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸುವ ಹಾಗೂ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಯೋಜನೆಗಳನ್ನು ರೂಪಿಸಲಾಗಿತ್ತು. ಆದರೆ ಈಗಿನ ಸರ್ಕಾರ ಈ ಬಗ್ಗೆ ಆಸಕ್ತಿ ವಹಿಸುತ್ತಿಲ್ಲ. ಸೋಲಾರ್ ಬೇಲಿ ಸೇರಿದಂತೆ ತಾತ್ಕಾಲಿಕ ಕ್ರಮಗಳಿಂದ ಸಮಸ್ಯೆ ಪರಿಹಾರವಾಗುತ್ತಿಲ್ಲ. ಮಾನವ ಜೀವಹಾನಿಯಾದ ಬಳಿಕ ಪರಿಹಾರ ನೀಡುವುದಕ್ಕಿಂತ ಮುನ್ನವೇ ಶಾಶ್ವತ ಯೋಜನೆ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಜಾರಿಗೊಳಿಸುವುದು ಅಗತ್ಯ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಜನರೇ ಕಾನೂನು ಕೈಗೆತ್ತಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಎಚ್ಚರಿಸಿದರು.

ಅಧಿವೇಶನಕ್ಕೆ ಮುತ್ತಿಗೆ : ಸುಜಾ

ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಮಾತನಾಡಿ, ಕೊಡಗಿನಲ್ಲಿ ಆನೆಗಳ ಹಾವಳಿ ಮಿತಿಮೀರಿರುವ ಕುರಿತು ಸದನದಲ್ಲಿ ಐದು ಬಾರಿ ಪ್ರಸ್ತಾಪಿಸಿ ಶಾಶ್ವತ ಯೋಜನೆ ರೂಪಿಸುವಂತೆ ಒತ್ತಾಯಿಸಿದ್ದರೂ ಸರ್ಕಾರ ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಆನೆ-ಮಾನವ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದ ರೂ.೧೫೦ ಕೋಟಿ ಅನುದಾನ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಾ. ೧೩ರಿಂದ ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆ ರಾಜಕೀಯ ಭೇದ ಮರೆತು ಒಗ್ಗೂಡಿ ವಿಧಾನಸಭೆಗೆ ಮುತ್ತಿಗೆ ಹಾಕುವ ಮೂಲಕ ಸರ್ಕಾರದ ಗಮನ ಸೆಳೆಯಬೇಕು ಎಂದು ಕರೆ ನೀಡಿದರು. ಇದೇ ತಿಂಗಳ ೧೬ರಂದು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿ ಕಚೇರಿ ಎದುರು ಶಾಶ್ವತ ಯೋಜನೆಗೆ ಆಗ್ರಹಿಸಿ ಧರಣಿ ನಡೆಸುವಂತೆ ಕರೆ ನೀಡಿದರು.

ಅರಣ್ಯ ಇಲಾಖೆ ರೂಪಿಸಿರುವ ಕ್ರಿಯಾ ಯೋಜನೆಯ ಪ್ರತಿಯನ್ನು ನೀಡುವಂತೆ ಕಳೆದ ಒಂದು ವರ್ಷದಿಂದ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ ಎಂದು ಸಿಸಿಎಫ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಸರ್ವಪಕ್ಷಗಳು ಹಾಗೂ ರೈತ ಸಂಘಟನೆಗಳ ಸಭೆ ಕರೆದು ಶಾಶ್ವತ ಯೋಜನೆಯ ರೂಪುರೇಷೆ ಸಿದ್ಧಪಡಿಸುವಂತೆ ಸೂಚಿಸಿದರು.

ಚೆಕ್ ನೀಡುವುದಷ್ಟೇ ಕರ್ತವ್ಯವಲ್ಲ : ರವಿ ಕಾಳಪ್ಪ

ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ಜಿಲ್ಲೆಯಲ್ಲಿ ಆನೆ ದಾಳಿಗೆ ಸಿಲುಕಿ ನಿರಂತರವಾಗಿ ಸಾವುಗಳು ಸಂಭವಿಸುತ್ತಿದ್ದರೂ ಜನಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸಮಸ್ಯೆಯ ಗಂಭೀರತೆಯನ್ನು ಅರಿತುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಆನೆ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಪರಿಹಾರದ ಚೆಕ್ ನೀಡುವುದಷ್ಟೇ ಸರ್ಕಾರದ ಕರ್ತವ್ಯವಲ್ಲ. ಮಾನವ ಜೀವಕ್ಕೆ ಬೆಲೆ ನೀಡುವ ರೀತಿಯಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಯಡೂರು ಗ್ರಾಮದ ಕಾರ್ಮಿಕ ಅಣ್ಣಪ್ಪ ಅವರ ಸಾವಿನಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ನೀಡುವ ಪರಿಹಾರದಿಂದ ಮೃತಪಟ್ಟ ವ್ಯಕ್ತಿಯ ಜೀವ ಮರಳಿ ಬರುವುದಿಲ್ಲ. ಆದ್ದರಿಂದ ಕಾಫಿ ತೋಟಗಳಿಗೆ ಕಾಡಾನೆಗಳು ಪ್ರವೇಶಿಸದಂತೆ ಶಾಶ್ವತ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು.

ಡಿಸಿಎಫ್‌ಗೆ ತರಾಟೆ

ಪ್ರತಿಭಟನೆ ನಡೆಯುತ್ತಿರುವ ಮಾಹಿತಿ ಇದ್ದರೂ ಸುಮಾರು ಎರಡು ಗಂಟೆ ತಡವಾಗಿ ಆಗಮಿಸಿದ ವೀರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನೀತ್ ಚೌಹಣ್ ಅವರನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು.

ಮೃತ ಅಣ್ಣಪ್ಪ ಮದ್ಯಪಾನ ಸೇವಿಸಿದ್ದರು ಎಂಬ ರೀತಿಯ ಹೇಳಿಕೆ ನೀಡಿದ್ದಕ್ಕೆ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸ್ಥಳಕ್ಕೆ ಆಗಮಿಸದಿದ್ದರೆ ಮೃತರ ಶವವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಮೃತಪಟ್ಟ ಅಣ್ಣಪ್ಪ ಮದ್ಯಪಾನ ಸೇವಿಸಿದ್ದರು ಎಂಬ ಹೇಳಿಕೆಯಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಡಿಸಿಎಫ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಸಲಗ ಸೆರೆಗೆ ಸಿಸಿಎಫ್ ಭರವಸೆ

ಪ್ರತಿಭಟನಾಕಾರರ ಒತ್ತಾಯದ ಹಿನ್ನೆಲೆಯಲ್ಲಿ ಸುಮಾರು ಮೂರು ಗಂಟೆಗಳ ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಣಿ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಅಮ್ಮತ್ತಿ ಶಾಖಾ ವ್ಯಾಪ್ತಿಯ ಯಡೂರು, ಹಚ್ಚಿನಾಡು ಹಾಗೂ ಕಣ್ಣಂಗಾಲ ಗ್ರಾಮಗಳಲ್ಲಿ ಉಪಟಳ ನೀಡುತ್ತಿರುವ ಒಂಟಿ ಸಲಗವನ್ನು ಶೀಘ್ರವೇ ಸೆರೆಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗುವುದು. ಗುಂಪಿನಲ್ಲಿ ಸಂಚರಿಸುವ ಕಾಡಾನೆಗಳನ್ನು ಕಾರ್ಯಾಚರಣೆ ಮೂಲಕ ನಿಯಂತ್ರಿಸಿ ರೇಡಿಯೋ ಕಾಲರ್ ಅಳವಡಿಸಲಾಗುವುದು ಎಂದು ಭರವಸೆ ನೀಡಿದರು. ಹೆಚ್ಚಿನ ಕಾಡಾನೆಗಳನ್ನು ಸೆರೆಹಿಡಿಯಲು ಸರ್ಕಾರ ಹಾಗೂ ರಾಜ್ಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ದುಬಾರೆ-ಕರಡಿಗೋಡು ಭಾಗದಲ್ಲಿ ಈಗಾಗಲೇ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಅಮ್ಮತ್ತಿ ಭಾಗದಲ್ಲಿಯೂ ಹೆಚ್ಚುವರಿ ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬೇರೆರ ರಂಜಿ ಮಾತನಾಡಿ, ಅಣ್ಣಪ್ಪ ಅವರ ಸಾವಿನಿಂದ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕಾರ್ಮಿಕರು ಭಯಪಡುವಂತಾಗಿದೆ. ಗ್ರಾಮಸ್ಥರು ಹಾಗೂ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಲ್ಲಿಯೂ ಆತಂಕ ಮೂಡಿದೆ. ಕಾಡಾನೆಗಳನ್ನು ಕೂಡಲೇ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಗುಮ್ಮಟ್ಟಿರ ಕಿಲನ್ ಗಣಪತಿ, ಕರ್ನಾಟಕ ರಾಜ್ಯ ರೈತ ಸಂಘದ ಅಮ್ಮತ್ತಿ ಹೋಬಳಿ ಅಧ್ಯಕ್ಷ ಚೇನಂಡ ಅಜಿತ್ ಪೂಣಚ್ಚ, ಗ್ರಾಮದ ಪ್ರಮುಖರಾದ ನಾಗರಾಜ್, ಗೋಪಾಲಕೃಷ್ಣ ಸೇರಿದಂತೆ ಬಿಜೆಪಿ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ವೀರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮಳೆಯ ನಡುವೆಯೂ ಪ್ರತಿಭಟನೆ ಮುಂದುವರಿಯಿತು. ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಸಿಸಿಎಫ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಸ್ತೆ ತಡೆ ಪ್ರತಿಭಟನೆ ಕೈಬಿಡಲಾಯಿತು. ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಶಿವರಾಂ, ಉಪವಲಯ ಅರಣ್ಯಾಧಿಕಾರಿ ಮನೋಜ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.