ಕುಶಾಲನಗರ, ಆ. ೧೨: ಆನೆ-ಮಾನವ ಸಹಬಾಳ್ವೆ ಕುರಿತು ಪ್ರತಿಯೊಬ್ಬರೂ ಅರಿವು ಹೊಂದುವ ಮೂಲಕ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅಭಿಪ್ರಾಯಪಟ್ಟರು.
ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ವಿಶ್ವ ಆನೆ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ವನ್ಯಜೀವಿಗಳ ಸಂರಕ್ಷಣೆಯಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಯಾವುದೇ ಸಂದರ್ಭದಲ್ಲಿ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪೊಲೀಸ್ ಹಾಗೂ ಅರಣ್ಯ ಇಲಾಖೆಗೆ ಸಾರ್ವಜನಿಕರಿಂದ ಅಗತ್ಯ ಸಹಕಾರ ದೊರೆತಲ್ಲಿ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಆನೆ ಸೇರಿದಂತೆ ಇತರ ವನ್ಯಜೀವಿಗಳ ಸಂರಕ್ಷಣೆ ಹಾಗೂ ಅವುಗಳ ಕುರಿತು ಮುಂದಿನ ಪೀಳಿಗೆಗೆ ಅರಿವು ಮತ್ತು ಜಾಗೃತಿ ಮೂಡಿಸುವುದು ಶಿಕ್ಷಕರು ಹಾಗೂ ಪೋಷಕರ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡ ವನ್ಯಜೀವಿ ತಜ್ಞ ವೈದ್ಯರಾದ ಡಾ. ಚಿಟ್ಟಿಯಪ್ಪ, ಡಾ. ಮುಜೀಬ್, ಡಾ. ಸಿ.ಕೆ. ತಮ್ಮಯ್ಯ, ಕೆ. ಭುವನೇಶ್ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಆನೆ ಸಂರಕ್ಷಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿದರು.
ವನ್ಯಜೀವಿ ಸಂಘರ್ಷದ ಸಂದರ್ಭಗಳಲ್ಲಿ ದಕ್ಷಿಣ ಕೊಡಗಿನಲ್ಲಿ ಅರಣ್ಯ ಇಲಾಖೆಯೊಂದಿಗೆ ನಿರಂತರವಾಗಿ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಕೈಜೋಡಿಸುತ್ತಿರುವ ಬಿ. ಶೆಟ್ಟಿಗೇರಿಯ ಅನಿಲ್ ಕಡೆಮಾಡ, ಜಗ ಚೇರಂಡ ಹಾಗೂ ತಂಡದ ಸದಸ್ಯರನ್ನು ಅರಣ್ಯ ಇಲಾಖೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇಲಾಖೆಯ ಸಾಧಕ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನೂ ಗೌರವಿಸಲಾಯಿತು.
ವಿಶ್ವ ಆನೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಅರಣ್ಯ ಇಲಾಖೆಯ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಣಿ ಅವರು ಆನೆಗಳ ಕುರಿತ ಮಾಹಿತಿಯುಳ್ಳ ಪೋಸ್ಟರ್ಗಳು ಹಾಗೂ ಕಿರುಹೊತ್ತಿಗೆಗಳನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳಾದ ಅಭಯ ಶಂಕರ್, ಸೆಂದಿಲ್ ಕುಮಾರ್, ನವೀನ್ ಕುಮಾರ್, ಶ್ರೀನಿವಾಸ್ ನಾಯಕ್, ಅನನ್ಯ ಕುಮಾರ್, ಪರಿಸರ ಜಾಗೃತಿ ಸಮಿತಿಯ ಸಂಚಾಲಕ ಟಿ.ಜಿ. ಪ್ರೇಮ್ ಕುಮಾರ್, ಜ್ಞಾನಗಂಗಾ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ನಿಂಗಪ್ಪ, ವಲಯ ಅರಣ್ಯಾಧಿಕಾರಿ ರಕ್ಷಿತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಬಳಿಯಿಂದ ಹೊರಟ ವಿದ್ಯಾರ್ಥಿಗಳ ಜಾಥಾಕ್ಕೆ ಕುಶಾಲನಗರದ ನ್ಯಾಯಾಧೀಶರಾದ ಚೈತ್ರ ಅವರು ಹಸಿರು ನಿಶಾನೆ ತೋರಿಸಿದರು. ಬಳಿಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸ್ಥಳೀಯ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.