ಸಿದ್ದಾಪುರ, ಆ. ೧೪: ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ನಿಲ್ಲಿಸಲಾಗಿದ್ದ ಖಾಸಗಿ ವಾಹನಗಳ ವಿರುದ್ಧ ಪೊಲೀಸರು ಶುಕ್ರವಾರ ಕ್ರಮಕೈಗೊಂಡು, ಕ್ರೇನ್ ಮೂಲಕ ವಾಹನಗಳನ್ನು ತೆರವುಗೊಳಿಸಿದರು.
ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದರು. ಆಸ್ಪತ್ರೆ ಆವರಣದಲ್ಲಿ ಖಾಸಗಿ ವ್ಯಕ್ತಿಗಳು ತಮ್ಮ ವಾಹನಗಳನ್ನು ದಿನಗಟ್ಟಲೆ ನಿಲ್ಲಿಸಿ ಬೇರೆಡೆ ತೆರಳುತ್ತಿರುವ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದಿದ್ದವು.
ವಾಹನಗಳನ್ನು ಆಸ್ಪತ್ರೆ ಆವರಣದಲ್ಲಿ ನಿಲ್ಲಿಸುವುದರಿಂದ ಆ್ಯಂಬ್ಯುಲೆನ್ಸ್ಗಳನ್ನು ನಿಲ್ಲಿಸಲು ಹಾಗೂ ರೋಗಿಗಳನ್ನು ಆಸ್ಪತ್ರೆಗೆ ಕರೆತರುವ ವಾಹನಗಳ ಸಂಚಾರಕ್ಕೂ ತೊಂದರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸಮ್ಮದ್ ಸೇರಿದಂತೆ ಸಾರ್ವಜನಿಕರು ಹಲವು ಬಾರಿ ಪೊಲೀಸರಿಗೆ ದೂರು ನೀಡಿದ್ದರು.
ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆಯ ಸಿದ್ದಾಪುರ ಘಟಕದ ವತಿಯಿಂದಲೂ ಠಾಣಾಧಿಕಾರಿ ಮಂಜುನಾಥ್ ಅವರಿಗೆ ದೂರು ನೀಡಿ, ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಲಾಗಿರುವ ಖಾಸಗಿ ವಾಹನಗಳನ್ನು ತೆರವುಗೊಳಿಸುವಂತೆ ಮನವಿ ಮಾಡಲಾಗಿತ್ತು. ದೂರುಗಳ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆ ಆವರಣದಲ್ಲಿದ್ದ ವಾಹನಗಳನ್ನು ಕ್ರೇನ್ ಮೂಲಕ ತೆರವುಗೊಳಿಸಿ, ವಾಹನ ಮಾಲೀಕರಿಗೆ ದಂಡ ವಿಧಿಸಿದರು. ಇನ್ನು ಮುಂದೆ ಆಸ್ಪತ್ರೆ ಆವರಣದಲ್ಲಿ ಅನಗತ್ಯವಾಗಿ ಖಾಸಗಿ ವಾಹನಗಳನ್ನು ನಿಲ್ಲಿಸಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾಧಿಕಾರಿ ಮಂಜುನಾಥ್ ಎಚ್ಚರಿಕೆ ನೀಡಿದರು.