ಚೆಯ್ಯಂಡಾಣೆ, ಆ. ೧೬: ಚೆಯ್ಯಂಡಾಣೆ ನರಿಯಂದಡ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಕಾಫಿ, ಅಡಿಕೆ, ಬಾಳೆ ಸೇರಿದಂತೆ ವಿವಿಧ ಕೃಷಿ ಗಿಡಗಳನ್ನು ತುಳಿದು ನಾಶಪಡಿಸಿದೆ. ಇದರಿಂದ ಬೆಳೆಗಾರರಿಗೆ ಅಪಾರ ನಷ್ಟ ಉಂಟಾಗಿದೆ.

ನರಿಯAದಡ ಗ್ರಾಮದ ಬೆಳೆಗಾರರಾದ ಸುಧೀರ್, ಸತೀಶ್ ಸೇರಿದಂತೆ ಹಲವರ ತೋಟಗಳಿಗೆ ಕಾಡಾನೆಗಳ ಹಿಂಡು ನುಗ್ಗಿ ಕೃಷಿ ಬೆಳೆಗಳನ್ನು ಹಾನಿಗೊಳಿಸಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಕಾಡಾನೆಗಳು ನಾಶಪಡಿಸುತ್ತಿರುವುದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಗ್ರಾಮದಲ್ಲಿ ನಿರಂತರವಾಗಿ ಕಾಡಾನೆಗಳ ಸಂಚಾರ ಇರುವುದರಿಂದ ತೋಟದ ಕೆಲಸಕ್ಕೆ ಕಾರ್ಮಿಕರು ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಗೆ ಹಲವು ಬಾರಿ ಮಾಹಿತಿ ನೀಡಿದರೂ ಅಧಿಕಾರಿಗಳ ನಿರ್ಲಕ್ಷö್ಯದಿಂದ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಬೆಳೆಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಡಾನೆಗಳ ನಿರಂತರ ಓಡಾಟದಿಂದ ರಸ್ತೆಯಲ್ಲಿ ಸಂಚರಿಸಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅರಣ್ಯ ಇಲಾಖೆ ಕೂಡಲೇ ಕಾಡಾನೆಗಳ ಹಾವಳಿಯನ್ನು ನಿಯಂತ್ರಿಸಲು ಶಾಶ್ವತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಕಾಡಾನೆ ದಾಳಿಯಿಂದ ಬೆಳೆ ನಷ್ಟ ಅನುಭವಿಸಿರುವ ತೋಟದ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.