ಮಡಿಕೇರಿ, ಆ. ೧೭: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಡಾನೆ ಹಾವಳಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಹಾಗೂ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಅರಣ್ಯ ಭವನದ ಎದುರು ಪ್ರತಿಭಟನೆ ನಡೆಯಿತು.
ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಗೆ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಅರಣ್ಯ ಇಲಾಖೆ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಅರಣ್ಯ ಇಲಾಖೆ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು ಅರಣ್ಯ ಭವನದ ಸುತ್ತ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ಕಚೇರಿಯ ಪ್ರವೇಶದ್ವಾರದಲ್ಲಿ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಮುಂದಾದರು. ಆದರೆ ಆಕ್ರೋಶಭರಿತರಾದ ಪ್ರತಿಭಟನಾಕಾರರು ಬ್ಯಾರಿಕೇಡ್ ತಳ್ಳಿ ಕಚೇರಿ ಒಳನುಗ್ಗಲು ಯತ್ನಿಸಿದರು. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟ ಪರಿಣಾಮ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದವೂ ನಡೆಯಿತು.
ಸಿಸಿಎಫ್ ಆಗಮನಕ್ಕೆ ಪಟ್ಟು
ಸಿಸಿಎಫ್ ಸ್ಥಳಕ್ಕೆ ಆಗಮಿಸಿ ತಮ್ಮ ಅಹವಾಲು ಆಲಿಸಬೇಕೆಂದು ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಪ್ರತಿಭಟನಾನಿರತರು ಬಿಗಿಪಟ್ಟು ಹಿಡಿದರು. ಹಲವು ಬಾರಿ ಪ್ರತಿಭಟನೆ ನಡೆಸಿ ಕಾಡಾನೆ ಹಾವಳಿ ಸಮಸ್ಯೆಯ ಬಗ್ಗೆ ಗಮನ ಸೆಳೆದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಇನ್ನೆಷ್ಟು ಜೀವಗಳು ವನ್ಯಜೀವಿ ದಾಳಿಗೆ ಬಲಿಯಾಗಬೇಕು ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಕಚೇರಿಯ ಒಳಭಾಗದಲ್ಲಿದ್ದ ಸಿಸಿಎಫ್ ಸೋನಾಲ್ ವೃಷ್ಣಿ ಹಾಗೂ ಡಿಎಫ್‌ಓಗಳಾದ ಅಭಿಷೇಕ್, ವಿನೀತ್ ಚೌಹಾಣ್ ಅವರು ಪ್ರತಿಭಟನಾಕಾರರ ಬಳಿಗೆ ಆಗಮಿಸಿದರು. ಈ ವೇಳೆ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು.
ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಜಿಲ್ಲೆಯಲ್ಲಿ ವನ್ಯಜೀವಿಗಳಿಂದ ಇಷ್ಟೆಲ್ಲ ಸಮಸ್ಯೆಗಳಾಗುತ್ತಿದ್ದರೂ ಅರಣ್ಯಾಧಿಕಾರಿಗಳು ಮೌನವಾಗಿ ಕುಳಿತಿದ್ದಾರೆ. ಕರಡಿಗೋಡಿನಲ್ಲಿ ಕಾಡಾನೆ ದಾಳಿಗೆ ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿಗೆ ತರಲು ಕಾರಣವೇನು. ಇದರ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿದರು. ವನ್ಯಜೀವಿ ದಾಳಿಯಿಂದ ಜನರು ಸೇರಿದಂತೆ ಜಾನುವಾರುಗಳು ನಿತ್ಯ ಬಲಿಯಾಗುತ್ತಿವೆ ಎಂದರು.
ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಉನ್ನತಾಧಿಕಾರಿಗಳಿಗೆ ಇಲ್ಲಿನ ಗಂಭೀರತೆಯನ್ನು ತಿಳಿಸುವ ಪ್ರಯತ್ನ ನಡೆಸಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಈ ಹಿಂದೆ ಪ್ರತಿಭಟನೆ ನಡೆಸಿದ್ದ ವೇಳೆ ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಆ ಭರವಸೆ ಹುಸಿಯಾಗಿದೆ. ಇದುವರೆಗೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಇಷ್ಟೊಂದು ಪ್ರಾಣಗಳು ಹೋಗುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ತೋಟಗಳಿಗೆ ತೆರಳಲು ಜನರು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಮಾತನಾಡಿ, ಮದೆನಾಡಿನಲ್ಲಿ ವಿದ್ಯಾರ್ಥಿನಿ ಬಲಿಯಾದ ಸಂದರ್ಭದಲ್ಲೇ ಇಲಾಖೆ ಎಚ್ಚೆತ್ತುಕೊಳ್ಳಬೇಕಾಗಿತ್ತು. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಅರಣ್ಯ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಮಾತನಾಡಿ, ಅರಣ್ಯಾಧಿಕಾರಿಗಳ ಮೇಲಿನ ನಂಬಿಕೆಯನ್ನು ಜನರು ಕಳೆದುಕೊಂಡಿದ್ದಾರೆ. ಉನ್ನತಾಧಿಕಾರಿಗಳನ್ನು ಜಿಲ್ಲೆಗೆ ಕರೆಸಿ ಸಮಸ್ಯೆಯ ವಾಸ್ತವತೆಯನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ಮುಖಂಡ ಆರ್.ಕೆ. ಚಂದ್ರು ಮಾತನಾಡಿ, ಅರಣ್ಯ ಇಲಾಖೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಮಾತ್ರ ಶೂನ್ಯವಾಗಿದೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಲೋಕೇಶ್, ಜಿಲ್ಲಾ ವಕ್ತಾರ ಬಿ.ಕೆ. ಅರುಣ್ ಕುಮಾರ್, ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.