ಮಡಿಕೇರಿ, ಆ. ೧೮: ಕೊಡಗು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆ-ಮಾನವ ಸಂಘರ್ಷವನ್ನು ತಡೆಗಟ್ಟಲು ಅರಣ್ಯ ಸಚಿವರು ಜಿಲ್ಲೆಗೆ ಆಗಮಿಸಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕೆಂದು ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ವಿಧಾನಸಭೆಯಲ್ಲಿ ಒತ್ತಾಯಿಸಿದರು.

ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕೊಡಗು ಜಿಲ್ಲೆಯಲ್ಲಿ ಕಾಡಾನೆ-ಮಾನವ ಸಂಘರ್ಷ ತಾರಕಕ್ಕೇರಿದ್ದು, ನಿರಂತರ ಸಾವು-ನೋವುಗಳು ಸಂಭವಿಸುತ್ತಿವೆ. ಕಾಡಾನೆ ದಾಳಿಯಿಂದಾಗಿ ಜನರು ಭಯಭೀತರಾಗಿದ್ದು, ರೈತರು ಹಾಗೂ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮಸ್ಯೆ ಪರಿಹಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಅರಣ್ಯ ಇಲಾಖೆ ನಿರೀಕ್ಷಿತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ‘ಪ್ರಾಜೆಕ್ಟ್ ಎಲಿಫೆಂಟ್’ ಯೋಜನೆ ರೂಪಿಸಲಾಗಿದ್ದರೂ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅಗತ್ಯ ನೆರವು ದೊರೆಯುತ್ತಿಲ್ಲ. ರಾಜ್ಯ ಸರ್ಕಾರದ ವತಿಯಿಂದ ಸೋಲಾರ್ ಬೇಲಿ, ಕಂದಕ ಹಾಗೂ ಬ್ಯಾರಿಕೇಡ್‌ಗಳಂತಹ ಕ್ರಮಗಳನ್ನು ಕೈಗೊಂಡಿದ್ದರೂ ಸಂಘರ್ಷ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಪರಿಣಾಮಕಾರಿ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಕಾಡಾನೆ ದಾಳಿಯಲ್ಲಿ ಹಲವರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ನಿರಂತರ ದಾಳಿಗಳಿಂದಾಗಿ ಗ್ರಾಮೀಣ ಭಾಗದ ಜನರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ. ಕೃಷಿ ಬೆಳೆಗಳು ನಾಶವಾಗುತ್ತಿದ್ದು, ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಅರಣ್ಯ ಸಚಿವರು ಕೊಡಗಿಗೆ ಭೇಟಿ ನೀಡಿ ಸ್ಥಳೀಯ ಪರಿಸ್ಥಿತಿಯನ್ನು ಪರಿಶೀಲಿಸಿ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಸೂಕ್ತ ಪರಿಹಾರ ರೂಪಿಸಬೇಕು ಎಂದು ಪೊನ್ನಣ್ಣ ಒತ್ತಾಯಿಸಿದರು.

ಇದೇ ವೇಳೆ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಗದ್ದಲದ ನಡುವೆಯೇ ವಿಷಯ ಪ್ರಸ್ತಾಪಿಸಿದ ಪೊನ್ನಣ್ಣ, ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಅರಣ್ಯ ಭವನಕ್ಕೆ ಮುತ್ತಿಗೆ ಹಾಕುತ್ತಿದ್ದಾರೆ. ಆದರೆ ವಿಧಾನಸಭೆಯಲ್ಲಿ ಬಿಜೆಪಿಗರು ಚರ್ಚೆಗೆ ಅವಕಾಶ ನೀಡದೆ ಗದ್ದಲ ನಡೆಸುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದರು.