ಸಿದ್ದಾಪುರ, ಆ. ೨೨: ಆನೆ - ಮಾನವ ಸಂಘರ್ಷವನ್ನು ತಡೆಗಟ್ಟಲು ಶಾಶ್ವತ ಯೋಜನೆಯನ್ನು ರೂಪಿಸಬೇಕೆಂದು ಒತ್ತಾಯಿಸಿ ತಾ. ೩೧ ರಂದು ಕಾರ್ಮಿಕ ಸಂಘಟನೆ ಹಾಗೂ ರೈತ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಸಿದ್ದಾಪುರ ವ್ಯಾಪ್ತಿಯ ಬಂದ್ ಕರೆಯ ಹಿನ್ನೆಲೆಯಲ್ಲಿ ಶುಕ್ರವಾರದಂದು ವಿವಿಧ ಸಂಘಟನೆಗಳ ಸಮ್ಮುಖದಲ್ಲಿ ಸಿದ್ದಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯಿತು.
ಈ ಸಂದರ್ಭ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಹಾಗೂ ರೈತ ಸಂಘದ ಪದಾಧಿಕಾರಿಗಳು ಮಾತನಾಡಿ, ತಾ. ೨೪ ರಂದು ಸಿದ್ದಾಪುರ ಗ್ರಾಮ ಪಂಚಾಯಿತಿಯ ಕಚೇರಿಯ ಎದುರು ಬೆಳಿಗ್ಗೆ ೧೦ ಗಂಟೆಗೆ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿ ಬಳಿಕ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದೆಂದು ಸಭೆಯಲ್ಲಿ ನಿರ್ಧರಿಸಲಾಯಿತು.
ಅದೇ ದಿನ ೧೧ ಗಂಟೆಗೆ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಎದುರಿನಲ್ಲಿ ಕೂಡ ಪ್ರತಿಭಟನೆ ನಡೆಸಿ ಅಲ್ಲಿ ಕೂಡ ಮನವಿ ಪತ್ರ ನೀಡಲಾಗುವುದು. ನಂತರ ಮಧ್ಯಾಹ್ನ ೧೨ ಗಂಟೆಗೆ ಮಾಲ್ದಾರೆ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿ ಅಲ್ಲಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ನೀಡಲಾಗುವುದೆಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಭೆ ಬಳಿಕ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಮ್ಮತ್ತಿ ಹೋಬಳಿ ಅಧ್ಯಕ್ಷ ಚೇನಂಡ ಅಜಿತ್ ಪೂಣಚ್ಚ, ತಾ. ೨೪ ರಂದು ಮೂರು ಗ್ರಾಮ ಪಂಚಾಯಿತಿಗಳಲ್ಲಿ ಮನವಿ ಪತ್ರ ನೀಡಿ ಬೇಡಿಕೆ ಈಡೇರಿಸಲು ಒತ್ತಾಯಿಸಲಾಗುವುದು. ನಂತರ ತಾ. ೨೮ ರಂದು ಜಿಲ್ಲೆಗೆ ಕರ್ನಾಟಕ ರಾಜ್ಯದ ಅರಣ್ಯ ಸಚಿವ ರಾಮಲಿಂಗ ರೆಡ್ಡಿ ಭೇಟಿ ನೀಡುವ ಸಂದರ್ಭದಲ್ಲಿ ಹೋರಾಟ ಸಮಿತಿಗೆ ಸಚಿವರೊಂದಿಗೆ ಮಾತನಾಡಲು ಅವಕಾಶ ಕಲ್ಪಿಸಿ ಕೊಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದ್ದು, ನಂತರ ಸಚಿವರನ್ನು ಭೇಟಿ ಮಾಡಿ ಆನೆ - ಮಾನವ ಸಂಘರ್ಷಕ್ಕೆ ಶಾಶ್ವತ ಯೋಜನೆ ರೂಪಿಸುವಂತೆ ಮನವಿ ಮಾಡಲಾಗುವುದೆಂದು ತಿಳಿಸಿದರು.
ಕಾರ್ಮಿಕ ಮುಖಂಡ ಪಿ.ಆರ್. ಭರತ್ ಮಾತನಾಡಿ, ಜಿಲ್ಲೆಗೆ ಭೇಟಿ ನೀಡುವ ಅರಣ್ಯ ಸಚಿವರೊಂದಿಗೆ ಸಿದ್ದಾಪುರ ವ್ಯಾಪ್ತಿಯ ಹೋರಾಟ ಸಮಿತಿಯವರು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ಮಾಹಿತಿ ನೀಡಿದರು. ಅಲ್ಲದೆ ಮುಂದಿನ ಹೋರಾಟದ ರೂಪುರೇಷಗಳ ಬಗ್ಗೆ ಹೋರಾಟ ಸಮಿತಿ ನಿರ್ಧಾರ ಕೈಗೊಂಡು ಬಳಿಕ ತಾ. ೩೧ ರಂದು ಹಮ್ಮಿಕೊಂಡಿರುವ ಬಂದ್ ವಿಚಾರದ ಕುರಿತು ಮಾಹಿತಿ ನೀಡಲಾಗುವುದೆಂದು ತಿಳಿಸಿದರು.
ಈ ಸಂದರ್ಭ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು, ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಹಾಜರಿದ್ದರು.