ಮಡಿಕೇರಿ, ಆ. ೨೨: ಡಿ. ದೇವರಾಜ ಅರಸು ಅವರು ರಾಜ್ಯದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಿ ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಹೇಳಿದರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ೧೧೧ ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಡಿ.ದೇವರಾಜ ಅರಸು ಅವರು ‘ಉಳುವವನೇ ಭೂಮಿಯ ಒಡೆಯ’ ಕಾಯ್ದೆ ಜಾರಿಗೊಳಿಸುವ ಮೂಲಕ ಭೂಮಿಯ ಹಕ್ಕನ್ನು ಕೊಡಿಸಿ ಬಡವರಿಗೆ ಬೆಳಕಾಗಿ ಕಂಡರು ಎಂದು ಜಿಲ್ಲಾಧಿಕಾರಿ ಅವರು ವರ್ಣಿಸಿದರು.
ಹಾವನೂರು ಆಯೋಗ ರಚಿಸುವ ಮೂಲಕ ಸಣ್ಣ ಸಣ್ಣ ಸಮಾಜಗಳು ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಸಾಮಾಜಿಕ ಕ್ರಾಂತಿಗೆ ಚಾಲನೆ ನೀಡಿದರು ಎಂದು ತಿಳಿಸಿದರು. ಡಿ. ದೇವರಾಜ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಸಾಮಾಜಿಕ ಭದ್ರತಾ ಯೋಜನೆ ಜಾರಿ, ಬೆಂಗಳೂರಿನಲ್ಲಿ ಎಲೆಕ್ಟಾçನಿಕ್ ಸಿಟಿಗೆ ಅಡಿಗಲ್ಲು ಹಾಕಿ ಅಭಿವೃದ್ಧಿಗೆ ಮುನ್ನುಡಿ ಬರೆದರು ಎಂದು ಅವರು ಬಣ್ಣಿಸಿದರು.
ಮೈಸೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಅವರು ಮಾತನಾಡಿ ದೇವರಾಜ ಅರಸು ಅವರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಿದಾಗ ಡಾ. ರಾಜ್‌ಕುಮಾರ್ ಅವರ ಬದುಕು ನೆನಪಿಗೆ ಬರುತ್ತದೆ ಎಂದು ತಿಳಿಸಿದರು.
ರಾಜ್ಯದ ಸಾಮಾಜಿಕ ಪರಿಸ್ಥಿತಿಯನ್ನು ಸೂಕ್ಷö್ಮವಾಗಿ ಗಮನಿಸಿದ ಡಿ. ದೇವರಾಜ ಅರಸು ಅವರ ವ್ಯಕ್ತಿತ್ವ ಬಹು ಅಪರೂಪ. ಸಾಹಿತ್ಯ ಪ್ರೇಮಿಯಾಗಿದ್ದ ಡಿ.ದೇವರಾಜ ಅರಸು ಅವರು ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡಿದ್ದರು ಎಂದು ಮೈಸೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆರ್.ಎನ್. ಬಿಂದುಮಣಿ ಅವರು ಮಾತನಾಡಿ, ವಿದ್ಯಾರ್ಥಿಗಳು ಇತರರನ್ನು ಅನುಕರಿಸುವ ಬದಲು, ತಮ್ಮ ಆಸಕ್ತಿ ಹಾಗೂ ಸಾಮರ್ಥ್ಯವನ್ನು ಅರಿತುಕೊಂಡು ಜೀವನದಲ್ಲಿ ಮುಂದುವರಿಯಬೇಕು ಎಂದು ಸಲಹೆ ನೀಡಿದರು.
ಕೇವಲ ಪರೀಕ್ಷೆಯ ಫಲಿತಾಂಶವನ್ನೇ ಆಧರಿಸಿ ಜೀವನದ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಓದಿನ ಜೊತೆಗೆ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ. ಪ್ರತಿಯೊಬ್ಬರೂ ತಮ್ಮ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿಕೊಂಡು, ಅದರತ್ತ ಧೈರ್ಯದಿಂದ ಹೆಜ್ಜೆ ಇಡಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್ ಅವರು ಮಾತನಾಡಿ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಎಲ್ಲಾ ವಿರೋಧಗಳ ನಡುವೆಯೂ ಮಹತ್ವದ ಅಭಿವೃದ್ಧಿ ಹಾಗೂ ಸಾಮಾಜಿಕ ಸುಧಾರಣಾ ಕಾರ್ಯಕ್ರಮ ಜಾರಿಗೊಳಿಸಿ ಸಮಾಜದ ಬದಲಾವಣೆಗೆ ಕಾರಣರಾದರು ಎಂದು ಅಭಿಪ್ರಾಯಪಟ್ಟರು.
ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಪ್ರಮುಖರಾದ ಮೇದಪ್ಪ, ತಹಶೀಲ್ದಾರ್ ಶ್ರೀಧರ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಗಣಪತಿ, ಡಿಎಸ್‌ಎಸ್ ಜಿಲ್ಲಾ ಸಂಚಾಲಕರಾದ ದಿವಾಕರ, ಲೋಕೋಪಯೋಗಿ ಇಲಾಖೆ ಇಇ ಪ್ರಭು, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಎA. ಯತ್ನಟ್ಟಿ, ಜಿ.ಪಂ.ಎAಜಿನಿಯರ್ ನಾಯಕ್, ಜಯಣ್ಣ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಲೋಕೇಶ್, ಪ್ರಕಾಶ್, ಭಾರತಿ, ಚಂದ್ರು, ಬಿಸಿಎಂ ಇಲಾಖೆ ವ್ಯವಸ್ಥಾಪಕರಾದ ಶಿವಶಂಕರ ಹಾಗೂ ಇತರರು ಇದ್ದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೇಖರ್ ಸ್ವಾಗತಿಸಿದರು. ಪವನ್ ಕುಮಾರ್ ನಿರೂಪಿಸಿದರು. ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ತಾಲ್ಲೂಕು ಅಧಿಕಾರಿ ಶ್ರೀಕಾಂತ್ ವಂದಿಸಿದರು.