ಗೋಣಿಕೊಪ್ಪಲು, ಆ.೨೩: ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಪ್ರವಾಸಿಗನೊಬ್ಬ ಕಾಡಾನೆ ದಾಳಿಗೆ ಮೃತಪಟ್ಟ ಘಟನೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಗೋಣಿಕೊಪ್ಪದಲ್ಲಿ ಪ್ರತಿಭಟನೆ ನಡೆಯಿತು.

ಗೋಣಿಕೊಪ್ಪ ಪಟ್ಟಣದಲ್ಲಿ ರೈತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಕಾಡಾನೆಗಳ ದಾಳಿಯಿಂದ ರೈತರು, ಕಾರ್ಮಿಕರು ಹಾಗೂ ಸಾರ್ವಜನಿಕರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ. ಕಾಡಾನೆಗಳ ಸಂಚಾರದ ಬಗ್ಗೆ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡುವ ಪರಿಣಾಮಕಾರಿ ವ್ಯವಸ್ಥೆ ರೂಪಿಸುವುದರ ಜೊತೆಗೆ, ಅರಣ್ಯ ಪ್ರದೇಶಗಳ ನಿರ್ವಹಣೆ ಹಾಗೂ ಜನರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ ಹಾಗೂ ಕಾರ್ಮಿಕ ನಾಯಕ ಭರತ್ ಮಾತನಾಡಿ, ಮಾನವ ಜೀವಗಳ ರಕ್ಷಣೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಕಾಡಾನೆಗಳ ಹಾವಳಿ ನಿಯಂತ್ರಿಸಲು ಶಾಶ್ವತ ಪರಿಹಾರ ರೂಪಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಪುಚ್ಚಿಮಾಡ ರಾಯ್ ಮಾದಪ್ಪ, ಸಿ.ಬಿ. ಪೂಣಚ್ಚ, ಚಂದ್ರಪ್ರಕಾಶ್, ಕುಟ್ಟಪ್ಪ ಸೇರಿದಂತೆ ರೈತ ಸಂಘದ ಮುಖಂಡರು ಹಾಗೂ ಹಲವರು ಭಾಗವಹಿಸಿದ್ದರು.