ಮಡಿಕೇರಿ, ಆ.೨೩: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಮತ್ತು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಉತ್ತಮÀ ಮಳೆಗಾಗಿ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.
ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದ ಮುಖ್ಯ ಅರ್ಚಕ ಕುಶಾಲ್ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು. ಬೆಳಿಗ್ಗೆ ೬ ಗಂಟೆಗೆ ದೇವಾಲಯಕ್ಕೆ ಆಗಮಿಸಿದ ಸಚಿವರು ಹಾಗೂ ಶಾಸಕರು ದೇವಾಲಯದ ಪ್ರದಕ್ಷಿಣೆ ನಡೆಸಿ, ನಾಡಿನಾದ್ಯಂತ ಉತ್ತಮ ಮಳೆಯಾಗಿ ಜಲಾಶಯಗಳು ಭರ್ತಿಯಾಗಬೇಕು. ಉತ್ತಮ ಬೆಳೆ, ಕುಡಿಯುವ ನೀರು ಹಾಗೂ ಜನರ ಜೀವನದಲ್ಲಿ ಸಮೃದ್ಧಿ, ಸಂತಸ ನೆಲೆಸಬೇಕು ಎಂದು ಶ್ರೀ ಇಗ್ಗುತಪ್ಪ ದೇವರಲ್ಲಿ ಪ್ರಾರ್ಥಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಹೆಚ್ಚಿನ ಮಳೆಗಾಗಿ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ರುದ್ರಾಭಿಷೇಕ ಸೇರಿದಂತೆ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದರು.
ತಾಯಿ ಕಾವೇರಿ ಹಾಗೂ ಇಗ್ಗುತಪ್ಪನ ನಾಡಿನಲ್ಲಿ ಹೆಚ್ಚಿನ ಮಳೆಯಾದರೆ ಜಲಾಶಯಗಳು ಭರ್ತಿಯಾಗಿ ಉತ್ತಮ ಬೆಳೆ ಬೆಳೆಯಲು ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಅನುಕೂಲವಾಗಲಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನಾಡಿನಾದ್ಯಂತ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥಿಸಲಾಗಿದೆ ಎಂದು ಹೇಳಿದರು.
ನಾಡಿನ ಎಲ್ಲೆಡೆ ಉತ್ತಮ ಮಳೆಯಾಗಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು, ಬೆಳೆಗಳಿಗೆ ನೀರು ಮತ್ತು ಅಗತ್ಯ ಮೇವು ದೊರೆಯುವಂತಾಗಬೇಕು. ಎಲ್ಲೆಡೆ ಸುಭಿಕ್ಷೆ ನೆಲೆಸಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಸಚಿವರು ತಿಳಿಸಿದರು.
ಕಾವೇರಿ ನದಿ ಪಾತ್ರದಲ್ಲಿ ಸರಾಸರಿ ಮಳೆಯಾದರೆ ಅಂತರರಾಜ್ಯ ಜಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಇದರಿಂದ ಶೇ.೯೦ರಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯುವ ಸಾಧ್ಯತೆಯಿದೆ ಎಂದು ಹೇಳಿದರು.
ಸಂಕಷ್ಟದ ಸಂದರ್ಭದಲ್ಲಿ ಪರಿಹಾರ ಕಂಡುಕೊಳ್ಳುವುದು ಅಗತ್ಯ. ಸರ್ಕಾರ ಎಲ್ಲರ ವಿಶ್ವಾಸ ಗಳಿಸಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಶುಭ ಹೆಜ್ಜೆ ಇಟ್ಟಿದೆ. ಹೆಚ್ಚಿನ ಮಳೆಗಾಗಿ ದೇವರಲ್ಲಿ ಪ್ರಾರ್ಥಿಸಲಾಗಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಪ್ರತಿನಿತ್ಯ ಕಾಡುಪ್ರಾಣಿಗಳ ಹಾವಳಿಯಿಂದ ಜನರು ಆತಂಕದಲ್ಲಿ ಬದುಕುವಂತಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾಡಾನೆ ಹಾವಳಿ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಶಾಶ್ವತ ಪರಿಹಾರಕ್ಕಾಗಿ ಕ್ರಮ ಮುಂದುವರಿದಿದೆ ಎಂದರು.
ಪ್ರವಾಸಿಗರು, ಕಾರ್ಮಿಕರು ಸೇರಿದಂತೆ ಸಾರ್ವಜನಿಕರು ಕೂಡ ಕಾಡಾನೆಗಳ ಸಂಚಾರದ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೆಲವು ಸಂದರ್ಭಗಳಲ್ಲಿ ಅನಾಹುತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಸಚಿವರು ಹೇಳಿದರು.
ಅಖಿಲ ಕೊಡವ ಸಮಾಜದ ಅಧ್ಯಕ್ಷ ಹಾಗೂ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದ ಭಕ್ತಜನ ಸಮಿತಿ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ, ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಚಮಂಡ ರಾಜಾ ಪೂವಣ್ಣ ಸಚಿವರನ್ನು ಬರಮಾಡಿಕೊಂಡರು.
ನೆಲಜಿ ದೇವಾಲಯಗಳ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ, ಪ್ರಮುಖರಾದ ಬಿದ್ದಾಟಂಡ ಎಸ್. ತಮ್ಮಯ್ಯ, ಲವ ಚಿಣ್ಣಪ್ಪ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.