ಸಿದ್ದಾಪುರ, ಆ.೨೪: ಕೊಡಗು ಜಿಲ್ಲೆಯಲ್ಲಿ ತೀವ್ರವಾಗುತ್ತಿರುವ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಸಿದ್ದಾಪುರ, ನೆಲ್ಲಿಹುದಿಕೇರಿ ಹಾಗೂ ಮಾಲ್ದಾರೆ ಗ್ರಾಮ ಪಂಚಾಯಿತಿ ಕಚೇರಿಗಳ ಎದುರು ಸೋಮವಾರ ಏಕಕಾಲದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ದಾಳಿಯಿಂದ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಸರ್ಕಾರಗಳು ತಾತ್ಕಾಲಿಕ ಪರಿಹಾರ ನೀಡುವುದನ್ನು ಬಿಟ್ಟು ಶಾಶ್ವತ ಯೋಜನೆ ರೂಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಿದ್ದಾಪುರ ಗ್ರಾ.ಪಂ. ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಮ್ಮತ್ತಿ ಹೋಬಳಿ ಅಧ್ಯಕ್ಷ ಚೇನಂಡ ಅಜಿತ್ ಪೂಣಚ್ಚ, ೨೦೨೬ರ ಜನವರಿಯಿಂದ ಇದುವರೆಗೆ ಎಂಟು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ೯ ಮಂದಿ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕಳೆದ ಐದು ವರ್ಷಗಳ ಅಂಕಿ-ಅAಶಗಳನ್ನು ಗಮನಿಸಿದರೆ ಜಿಲ್ಲೆಯಲ್ಲಿ ಹಲವಾರು ಅಮಾಯಕರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮಸ್ಯೆಯ ಗಂಭೀರತೆಯನ್ನು ಅರಿತು ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿವೆ ಎಂದು ಅವರು ಆರೋಪಿಸಿದರು.

ರೈತರು, ತೋಟ ಕಾರ್ಮಿಕರು ಮಾತ್ರವಲ್ಲದೆ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಲ್ಲಿಯೂ ಆತಂಕ ಮನೆಮಾಡಿದೆ. ಸಂಜೆಯಾಗುತ್ತಿದ್ದAತೆ ಗ್ರಾಮಗಳಲ್ಲಿ ಕಾಡಾನೆಗಳ ಭಯದಿಂದ ಕರ್ಫ್ಯೂ ವಿಧಿಸಿದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದರಿಂದ ಜನರ ಸಹಜ ಜೀವನವೇ ದುಸ್ತರವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಮಿಕ ಮುಖಂಡ ಎಚ್.ಬಿ. ರಮೇಶ್ ಮಾತನಾಡಿ, ಎಂಟು ತಿಂಗಳಲ್ಲಿ ೯ ಮಂದಿ ಕಾಡಾನೆ ದಾಳಿಗೆ ಬಲಿಯಾಗಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.

ಆಗಸ್ಟ್ ೨೮ರಂದು ರಾಜ್ಯ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಕೊಡಗು ಜಿಲ್ಲೆಗೆ ಆಗಮಿಸಲಿದ್ದು, ಈ ಸಂದರ್ಭದಲ್ಲಿ ಆನೆ-ಮಾನವ ಸಂಘರ್ಷ ತಡೆಗೆ ಶಾಶ್ವತ ಯೋಜನೆಯನ್ನು ಘೋಷಿಸಬೇಕು ಹಾಗೂ ವನ್ಯಜೀವಿಗಳ ಹಾವಳಿಯನ್ನು ನಿಯಂತ್ರಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತೋಟ ಕಾರ್ಮಿಕರ ಸಂಘದ ಅಧ್ಯಕ್ಷ ಎನ್.ಡಿ. ಕುಟ್ಟಪ್ಪ ಮಾತನಾಡಿ, ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಕಾರಣ ಜಿಲ್ಲೆಯಲ್ಲಿ ಆನೆಗಳ ಹಾವಳಿ ಮುಂದುವರಿದಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರಾದ ಎ.ಸಿ. ಸಾಬು, ಬೈಜು, ರೈತ ಸಂಘದ ಪದಾಧಿಕಾರಿಗಳಾದ ಎಂ.ವಿ. ಸಜೀವನ್, ಲಿಖಿತ್ ಸೋಮಣ್ಣ, ದೇವಣಿರ ಬೋಪಣ್ಣ, ಆಟೋ ಸಂಘದ ಪ್ರಮುಖರಾದ ವಿ. ಸುರೇಶ್, ಸಂಜೀವಿನಿ ಒಕ್ಕೂಟದ ಪ್ರಮುಖರಾದ ಯಮುನಾ ಸೇರಿದಂತೆ ವಿವಿಧ ಕಾರ್ಮಿಕ ಹಾಗೂ ರೈತ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ನAತರ ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿಯನ್ನು ರಾಜ್ಯ ಅರಣ್ಯ ಸಚಿವರಿಗೆ ತಲುಪಿಸಿ, ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸಿದವು.

ನೆಲ್ಲಿಹುದಿಕೇರಿಯಲ್ಲಿ ಪ್ರತಿಭಟನೆ

ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಕಾರ್ಮಿಕ ಸಂಘಟನೆಗಳು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿ, ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ರೂಪಿಸುವಂತೆ ಆಗ್ರಹಿಸಲಾಯಿತು. ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರಾದ ಪಿ.ಆರ್. ಭರತ್, ಟಿ.ಟಿ. ಉದಯಕುಮಾರ್, ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳಾದ ಹಳಗದ್ದೆ ಮಾದಪ್ಪ, ಎಂ.ಸಿ. ಚಂದ್ರಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಪದಾಧಿಕಾರಿ ಸುರೇಶ್ ಎನ್.ಕೆ., ಆಟೋ ಚಾಲಕ ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳಾದ ಪಿ.ಆರ್. ವಿನೋದ್, ಬಷೀರ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಮಾಲ್ದಾರೆ

ಆನೆ-ಮಾನವ ಸಂಘರ್ಷವನ್ನು ತಡೆಗಟ್ಟಲು ಶಾಶ್ವತ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು, ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಮಾಲ್ದಾರೆ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕಾರ್ಮಿಕ ಮುಖಂಡ ಪಿ.ಆರ್. ಭರತ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಂಘಟನೆಗಳ ಪ್ರಮುಖರು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವAತೆ ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ಪಿ.ಆರ್. ಭರತ್, ಆಗಸ್ಟ್ ೨೮ರಂದು ಅರಣ್ಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರನ್ನು ಒಗ್ಗೂಡಿಸಿ ಸಚಿವರ ಗಮನಕ್ಕೆ ಜಿಲ್ಲೆಯ ಆನೆ-ಮಾನವ ಸಂಘರ್ಷದ ಗಂಭೀರತೆಯನ್ನು ತರಲಾಗುವುದು ಎಂದು ಭರತ್ ತಿಳಿಸಿದರು.