ಸೋಮವಾರಪೇಟೆ, ಆ. ೨೭: ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ವೈದ್ಯರ ನೇಮಕ ಹಾಗೂ ನೈರ್ಮಲ್ಯ ವಿಭಾಗದ ಸಿಬ್ಬಂದಿಗಳಿಗೆ ಶೀಘ್ರ ವೇತನ ಪಾವತಿ ಬಗ್ಗೆ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ವಿಭಾಗೀಯ ಆರೋಗ್ಯ ಸೇವಾ ಪ್ರಾಧಿಕಾರದ ಉಪನಿರ್ದೇಶಕಿ ಡಾ. ಬಿ. ಮಲ್ಲಿಕಾ ಭರವಸೆ ನೀಡಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಸೋಮವಾರಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಸಮಸ್ಯೆ ಇದ್ದು ಅರೆವಳಿಕೆ ತಜ್ಞರು, ಮೂಳೆ ಮತ್ತು ಕೀಲು ತಜ್ಞರ ಖಾಯಂ ನೇಮಕಾತಿ, ಮಕ್ಕಳ ವೈದ್ಯರ ನೇಮಕ ಸೇರಿದಂತೆ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೈರ್ಮಲ್ಯ ವಿಭಾಗದ ಸಿಬ್ಬಂದಿಗಳಿಗೆ ವೇತನ ಪಾವತಿ ವಿಳಂಬ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಪ್ರಾಧಿಕಾರಕ್ಕೆ ದೂರು ಸಲ್ಲಿಸಲಾಗಿತ್ತು. ಈ ದೂರಿಗೆ ಸಂಬAಧಿಸಿದAತೆ ಖುದ್ದು ಸಮಸ್ಯೆ ವೀಕ್ಷಿಸಲು ಆಗಮಿಸಿದ್ದ ಆರೋಗ್ಯ ಸೇವಾ ಪ್ರಾಧಿಕಾರದ ಉಪನಿರ್ದೇಶಕಿ ಡಾ. ಮಲ್ಲಿಕಾ ಅವರು ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಅಹವಾಲು ಆಲಿಸಿದರು.

ಈ ಸಂದರ್ಭ ಸಂಘಟನೆಯ ಯುವ ಘಟಕದ ಅಧ್ಯಕ್ಷ ವಸಂತ್ ಆಚಾರ್ಯ ಮಾತನಾಡಿ, ಸಮೀಪದ ಹಾಸನ, ಮೈಸೂರು ಜಿಲ್ಲೆಗಳ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಸ್ಥಳೀಯ ಆಸ್ಪತ್ರೆ ಸಮಸ್ಯೆಗಳನ್ನ ಗಂಭೀರವಾಗಿ ಪರಿಗಣಿಸಿ, ವೈದ್ಯಾಧಿಕಾರಿಗಳ ನೇಮಕಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು. ಆಂಬ್ಯುಲೆನ್ಸ್ ಸೇವೆಯನ್ನು ಸಮರ್ಪಕಗೊಳಿಸಬೇಕು ಎಂದರು. ಇದಕ್ಕೆ ಸ್ಪಂದಿಸಿದ ಡಾ. ಮಲ್ಲಿಕಾ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಆಸ್ಪತ್ರೆ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ನೀಡುವ ಭರವಸೆಯಿತ್ತರು.

ಈ ಸಂದರ್ಭ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಚಂದ್ರು,ಪದಾದಿಕಾರಿಗಳಾದ ನಂದೀಶ್, ಜಾನ್ಸನ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು.