ಸೋಮವಾರಪೇಟೆ,ಆ.೨೯: ಪ್ರವಾಸಿಗನೊಬ್ಬ ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿದ ಪರಿಣಾಮ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರಪೇಟೆ ಸಮೀಪದ ಆಲೇಕಟ್ಟೆ ರಸ್ತೆಯಲ್ಲಿ ನಡೆದಿದೆ.

ಆಲೇಕಟ್ಟೆ ನಿವಾಸಿ ನಿಶಾಂತ್ (೧೫) ಗಾಯಗೊಂಡ ಬಾಲಕ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ರಭಸವಾಗಿ ಬಂದ ಮಾರುತಿ ಎರ್ಟಿಗಾ ಕಾರು ನಿಶಾಂತ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರು ಬಳಿಕ ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ಇದ್ದ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ನಿಶಾಂತ್‌ನ ಬಲಗೈಗೆ ಗಂಭೀರ ಗಾಯವಾಗಿದ್ದು, ತಲೆಯ ಭಾಗಕ್ಕೂ ಪೆಟ್ಟು ಬಿದ್ದಿದೆ. ಕೂಡಲೇ ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನಾ ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.