ಮಡಿಕೇರಿ, ಆ. ೨೯: ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನವನ್ನು ತಕ್ಷಣ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಹನುಮೇಗೌಡ, ಜಿಲ್ಲಾ ಅಧ್ಯಕ್ಷ ದಿನೇಶ್ ಜಿ.ಕೆ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೇಶ್ ಹೆಚ್.ಎಸ್. ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಕಳೆದ ಹಲವು ವರ್ಷಗಳಿಂದ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಸಿಬ್ಬಂದಿ, ಕಂಪ್ಯೂಟರ್ ಆಪರೇಟರ್‌ಗಳು, ಡಾಟಾ ಎಂಟ್ರಿ ಆಪರೇಟರ್‌ಗಳು ಹಾಗೂ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಸೂಕ್ತ ವೇತನ ಮತ್ತು ಸೇವಾ ಭದ್ರತೆ ಕಲ್ಪಿಸಬೇಕು. ಸೇರಿದಂತೆ ಒಟ್ಟು ೨೧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ವಾಣಿ, ಸಂತೋಷ, ಪಲ್ಲವಿ, ಶಾಮಲಾ, ಇಂದಿರಾ, ಜ್ಯೋತಿ, ಸುನಿತಾ, ಮಂಗಳ, ಜಯಮಾಲಾ, ವೇದಾವತಿ, ಸುನಿತಾ, ಚಿನ್ನಪ್ಪ, ಹರೀಶ, ರವಿ, ವಸಂತ್, ಸಂಘದ ಪದಾಧಿಕಾರಿಗಳು ಹಾಗೂ ಹೊರಗುತ್ತಿಗೆ ನೌಕರರು ಭಾಗವಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.