ಗೋಣಿಕೊಪ್ಪ, ಆ. ೩೦: ಶಿಸ್ತುಬದ್ಧ ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾದಾಗ ಮಾತ್ರ ಸಮಾಜದ ಯಶಸ್ಸು ಮತ್ತು ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅಭಿಮತ ವ್ಯಕ್ತಪಡಿಸಿದರು.
ವೀರಾಜಪೇಟೆ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ವತಿಯಿಂದ ಗೋಣಿಕೊಪ್ಪ ಅನುದಾನಿತ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯಾಂಗ, ಶಾಸಕಾಂಗ ಹಾಗೂ ಕಾರ್ಯಾಂಗಗಳ ಪ್ರಮುಖ ಜವಾಬ್ದಾರಿಗಳಲ್ಲಿ ಶಿಕ್ಷಣ ನೀಡುವುದೂ ಸೇರಿದೆ. ಆದರೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ನಾವು ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ. ಕಾಲಕ್ರಮೇಣ ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿದೆ ಎಂದು ಹೇಳಿದರು.
ದೆಹಲಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಮಾದರಿಯಲ್ಲಿ ಕರ್ನಾಟಕದಲ್ಲೂ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಬಲಗೊಳ್ಳುವುದರ ಜೊತೆಗೆ ಜನರು, ಪೋಷಕರು ಹಾಗೂ ವಿದ್ಯಾರ್ಥಿಗಳ ಮನಸ್ಥಿತಿಯಲ್ಲೂ ಬದಲಾವಣೆ ಅಗತ್ಯ ಎಂದು ಅಭಿಪ್ರಾಯಪಟ್ಟರು.
ಜಗತ್ತು ಬದಲಾಗುತ್ತಿರುವಂತೆ ಶಿಕ್ಷಣ ವ್ಯವಸ್ಥೆಯೂ ಬದಲಾಗಿದ್ದು, ಅವಕಾಶಗಳೂ ಹೆಚ್ಚಾಗಿವೆ. ವಿದ್ಯಾರ್ಥಿಗಳು ಶಿಸ್ತಿನಿಂದ ಬದುಕಿನ ಬಗ್ಗೆ ಚಿಂತನೆ ನಡೆಸಬೇಕು. ಗ್ರಾಮೀಣ ಪ್ರದೇಶದ ಮಕ್ಕಳು ಇಂದು ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡುತ್ತಿದ್ದಾರೆ. ಬಡತನದಿಂದ ಹೊರಬಂದು ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಬದುಕು ನಡೆಸಬೇಕೆಂಬ ಹಂಬಲ ವಿದ್ಯಾರ್ಥಿಗಳಲ್ಲಿ ಮೂಡಬೇಕು ಎಂದರು. ಈ ಸಂದರ್ಭ ಹತ್ತನೇ ತರಗತಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಶೇ.೧೦೦ ಫಲಿತಾಂಶ ಪಡೆದ ತಾಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಒಟ್ಟು ೨೮ ಶಾಲೆಗಳನ್ನು ಅಭಿನಂದಿಸ ಲಾಯಿತು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ. ಉತ್ತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ರಾಜೇಶ್, ಗೋಣಿಕೊಪ್ಪ ಅನುದಾನಿತ ಪ್ರೌಢಶಾಲೆಯ ಅಧ್ಯಕ್ಷ ಚಿಣ್ಣಪ್ಪ, ಮುಖ್ಯ ಶಿಕ್ಷಕ ಚೈತನ್ಯ ಡಿ.ಎಸ್., ಅನುದಾನಿತ ಪ್ರೌಢಶಾಲಾ ತಾಲೂಕು ಅಧ್ಯಕ್ಷ ಗಿಡ್ಡಯ್ಯ, ಸರ್ವದೇವತಾ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಪ್ರದೀಪ್ ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಲೋಕೇಶ್ ಎಚ್.ಡಿ., ಚೆಂಗಪ್ಪ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.