ಸಿದ್ದಾಪುರ, ಆ. ೩೧: ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ಶಾಖೆಯ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ವತಿಯಿಂದ ಜಾಗೃತಿ ಮೂಡಿಸಲಾಯಿತು. ಮೀನುಕೊಲ್ಲಿ ಶಾಖೆಯ ಉಪವಲಯ ಅರಣ್ಯಾಧಿಕಾರಿ ಸಚಿನ್ ನಿಂಬಾಳ್ಕರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೀನುಕೊಲ್ಲಿ ಶಾಖೆಯ ವ್ಯಾಪ್ತಿಗೆ ಒಳಪಡುವ ಚೆಟ್ಟಳ್ಳಿ, ವಾಲ್ನೂರು, ನಂಜರಾಯಪಟ್ಟಣ ಹಾಗೂ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದರು. ಶಾಲಾ-ಕಾಲೇಜುಗಳು, ಬಸ್ ನಿಲ್ದಾಣಗಳು, ಮಸೀದಿ, ದೇವಾಲಯ ಹಾಗೂ ಚರ್ಚ್ಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಾಡಾನೆಗಳ ಚಲನವಲನದ ಬಗ್ಗೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು. ಈ ಸಂದರ್ಭ ಕಾಡಾನೆಗಳಿಂದ ಸುರಕ್ಷಿತವಾಗಿರುವ ಕುರಿತು ತಿಳುವಳಿಕೆ ಪತ್ರಗಳನ್ನು ವಿತರಿಸಿ, ಭಿತ್ತಿಪತ್ರಗಳನ್ನು ಅಂಟಿಸಲಾಯಿತು.