ಮಡಿಕೇರಿ, ಸೆ. ೧; ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಲಾಗಿರುವ ಮೊಕದ್ದಮೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹಲದ್ವಾನಿ ರ್ಯಾಲಿ ಬಳಿಕ ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರು ರ್ಯಾಲಿ ನಡೆಸಿದ ಸ್ಥಳ ಶುದ್ಧೀಕರಣ ಮಾಡಿದ ವಿಚಾರವಾಗಿ ರಾಹುಲ್ ಗಾಂಧಿಯವರು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಆದರೆ, ಉತ್ತರಾಖಂಡ ಪೊಲೀಸರು ರಾಹುಲ್ ಗಾಂಧಿ ಅವರ ವಿರುದ್ಧವೇ ಮೊಕದ್ದಮೆ ದಾಖಲಿಸಿದ್ದು, ಇದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಸೇಡಿನ ರಾಜಕೀಯಕ್ಕಾಗಿ ಪೊಲೀಸರನ್ನು ಬಳಸಿಕೊಂಡಿರುವದು ನಾಚಿಕೆಗೇಡಿನ ಸಂಗತಿಯಾಗಿದ್ದು, ಕೂಡಲೇ ರಾಹುಲ್ ವಿರುದ್ಧದ ಮೊಕದ್ದಮೆ ರದ್ದು ಪಡಿಸಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಸಂಬAಧದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟçಪತಿಗಳಿಗೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರುಗಳಾದ ವೀಣಾ ಅಚ್ಚಯ್ಯ, ಟಿ.ಪಿ.ರಮೇಶ್, ಇಸ್ಮಾಯಿಲ್, ಪ್ರಕಾಶ್ ಆಚಾರ್ಯ, ತೆನ್ನೀರ ಮೈನಾ, ಸೂರಜ್ ಹೊಸೂರು, ಟಾಟು ಮೊಣ್ಣಪ್ಪ, ಅಪ್ರು ರವೀಂದ್ರ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕುಶಾಲನಗರ: ಉತ್ತರಾಖಂಡ್ನಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್ಐಆರ್ನ್ನು ಕೂಡಲೇ ರದ್ದುಪಡಿಸುವಂತೆ ಆಗ್ರಹಿಸಿ ನಗರ ಕಾಂಗ್ರೆಸ್ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ ಅವರ ಮೇಲೆ ಸೇಡಿನಿಂದ ಪ್ರಕರಣ ದಾಖಲಿಸಲಾಗಿದೆ. ಕೂಡಲೇ ಎಫ್ಐಆರ್ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್. ಕುಶಾಲ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ. ಪ್ರಮುಖರಾದ ಪ್ರಕಾಶ್, ಕಿರಣ್, ಶಿವಶಂಕರ್, ಹಮೀದ್ ಕಾರ್ಯಕರ್ತರು ಪಾಲ್ಗೊಂಡಿದ್ದರು.