ನಾಪೋಕ್ಲು, ಸೆ. ೫: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಇಲಾಖಾಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳಲಾಗುತ್ತಿರುವ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಮತ್ತು ಕೆಲವು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪೊನ್ನಣ್ಣ, ಅಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಕಾವೇರಿ ನೀರಾವರಿ ನಿಗಮದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕಾವೇರಿ ನದಿ ಸ್ವಚ್ಛತೆ ಹಾಗೂ ಪುನರ್ವಸತಿ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಿದ ಅವರು, ಬಾಕಿ ಉಳಿದಿರುವ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆರ್‌ಡಿಪಿಆರ್ ಇಲಾಖೆ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳ ರಸ್ತೆ ಅಭಿವೃದ್ಧಿ ಹಾಗೂ ನಿವೇಶನ ಹಂಚಿಕೆ ಕುರಿತು ಚರ್ಚಿಸಿದ ಅವರು, ಕಾಲೋನಿಗಳ ರಸ್ತೆ ಅಭಿವೃದ್ಧಿಗೆ ಸಂಬAಧಿಸಿದ ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕ್ಷೇತ್ರದ ಜನರಿಗೆ ಅಗತ್ಯವಿರುವ ಮೂಲಸೌಕರ್ಯ ಕಾಮಗಾರಿಗಳನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ, ಗುಣಮಟ್ಟ ಮತ್ತು ಪಾರದರ್ಶಕತೆಗೆ ಆದ್ಯತೆ ನೀಡಿ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಪೊನ್ನಣ್ಣ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರರ ಧರ್ಮಜ ಉತ್ತಪ್ಪ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪೃಥ್ಯು ಉಪಸ್ಥಿತರಿದ್ದರು.