ಶನಿವಾರಸಂತೆ: ಸೆ. ೫: ಸಮೀಪದ ಕೊಡ್ಲಿಪೇಟೆ ಕಲ್ಲುಮಠದ ಶ್ರೀಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮೈದಾನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕೊಡ್ಲಿಪೇಟೆ ವಲಯಮಟ್ಟದ ೧೪ ವರ್ಷ ವಯಸ್ಸಿನೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಹೋಬಳಿ ವ್ಯಾಪ್ತಿಯ ೯ ಶಾಲೆಗಳ ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿ ಸಂಘದ ಕ್ರೀಡಾ ಸಚಿವ ಮಿಥುನ್, ಕ್ರೀಡಾ ಜ್ಯೋತಿಯನ್ನು ಹಿಡಿದು ಓಟದ ಮೂಲಕ ತಂದು ಅತಿಥಿ ಗಣ್ಯರಿಗೆ ಹಸ್ತಾಂತರಿಸಿದರು. ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಕಾರ್ಯದರ್ಶಿ ಎಚ್.ಎಂ ದಿವಾಕರ್ ಮಾತನಾಡಿ, ಕ್ರೀಡೆಯು ಮಕ್ಕಳಲ್ಲಿ ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ನಾಯಕತ್ವದ ಗುಣ, ತಂಡದ ಮನೋಭಾವ ಹಾಗೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ ಎಂದರು.

ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ನಂತರ ವಾಲಿಬಾಲ್ ಕೊಕ್ಕೋ ಥ್ರೋಬಾಲ್, ಕಬಡ್ಡಿ ಇತರ ಕ್ರೀಡಾ ಸ್ಪರ್ಧೆಗಳು ನಡೆದವು. ಶಿವಕುಮಾರ್ ಸ್ವಾಮೀಜಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್‌ಶಿಪ್ ಪಡೆದು ತಾಲೂಕುಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದರು.

ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಡಿ.ಎಸ್.ವಿಶ್ವನಾಥ್, ಕೊಡ್ಲಿಪೇಟೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರವೀಶ್, ಬೆಸೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮುರಳಿಧರ್, ಶಾಲಾ ಮುಖ್ಯಶಿಕ್ಷಕ ಎಚ್.ಎಂ ಅಭಿಲಾಷ್, ದೈಹಿಕ ಶಿಕ್ಷಣ ಶಿಕ್ಷಕ ಪುನೀತ್, ವಿವಿಧ ಶಾಲಾ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಕ್ರೀಡಾ ಕಾರ್ಯದರ್ಶಿಗಳಾದ ಆಶಾ, ಸುನೀಲ್ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳನ್ನು ಸಮರ್ಪಕವಾಗಿ ನಿರ್ವಹಿಸಿದರು.