ಸೋಮವಾರಪೇಟೆ, ಸೆ. ೬: ಪಟ್ಟಣದ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ ಹಾಗೂ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಕಾರು ಮತ್ತು ಆಟೋ ನಿಲ್ದಾಣದ ಮೇಲ್ಛಾವಣಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಕಾರು ಮತ್ತು ಆಟೋ ನಿಲ್ದಾಣದ ಮೇಲ್ಛಾವಣಿ ನಿರ್ಮಾಣಕ್ಕೆ ಸರ್ಕಾರದಿಂದ ಸುಮಾರು ೨೭ ಲಕ್ಷ ರೂ. ಗಳ ಅನುದಾನ ಮಂಜೂರು ಮಾಡಲಾಗಿದೆ. ಚಾಲಕರು ಮತ್ತು ಆಟೋ ಮಾಲೀಕರ ಬಹುದಿನಗಳ ಬೇಡಿಕೆಯಾಗಿದ್ದ ಈ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬAಧಿಸಿದ ಇಂಜಿನಿಯರ್‌ಗಳಿಗೆ ಸೂಚಿಸಲಾಗಿದೆ ಎಂದರು.
ಚಾಲಕ ವೃತ್ತಿ ಸುಲಭವಾದುದಲ್ಲ. ಪ್ರತಿನಿತ್ಯ ಬಿಸಿಲು, ಮಳೆ ಎನ್ನದೆ ಸಾರ್ವಜನಿಕರಿಗೆ ಸೇವೆ ನೀಡುವ ಚಾಲಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ಬಾಡಿಗೆ ವಾಹನಗಳು ಹಾಗೂ ಆಟೋಗಳನ್ನು ನಿಲುಗಡೆ ಮಾಡಲು ಸೂಕ್ತ ವ್ಯವಸ್ಥೆ ಇಲ್ಲದೆ ಚಾಲಕರು ಪರದಾಡುತ್ತಿರುವುದು ಗಮನಕ್ಕೆ ಬಂದಿದೆ. ಮಳೆಯಲ್ಲಿಯೇ ವಾಹನಗಳನ್ನು ನಿಲ್ಲಿಸಿಕೊಂಡು ಪ್ರಯಾಣಿಕರಿಗಾಗಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮೇಲ್ಛಾವಣಿ ನಿರ್ಮಾಣವಾದ ಬಳಿಕ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.
ಭೂಮಿ ಪೂಜೆ ಸಂದರ್ಭ ಮೋಟಾರ್ ಯೂನಿಯನ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಉಪಾಧ್ಯಕ್ಷ ರಂಗಸ್ವಾಮಿ, ಕಾರ್ಯದರ್ಶಿ ಮಣಿ ಕುಶಾಲಪ್ಪ, ಆಟೋ ಯೂನಿಯನ್ ಅಧ್ಯಕ್ಷ ಎಸ್.ವಿ ಸಂಪತ್, ಉಪಾಧ್ಯಕ್ಷ ಪ್ರಸನ್ನ ಯಡೂರು, ಕಾರ್ಯದರ್ಶಿ ಪಿ.ಎಂ ಪವನ್ ಮತ್ತು ಯೂನಿಯನ್ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರುಗಳು ಇದ್ದರು.