ಕುಶಾಲನಗರ, ಸೆ. ೬: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಹಾಗೂ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮೂರು ದಿನಗಳ ಉದ್ಯಮಶೀಲತಾ ತಿಳುವಳಿಕೆ ಕಾರ್ಯಾಗಾರ ಆಯೋಜಿಸಲಾಗಿತ್ತು.
ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರ ಮಡಿಕೇರಿ ಜಂಟಿ ನಿರ್ದೇಶಕ ಕೆ.ಹನುಮಂತರಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾವಂತ ಯುವಜನರು ನೌಕರಿಯನ್ನು ಹುಡುಕುವ ಬದಲು ಸ್ವಂತ ಉದ್ಯೋಗ ಮಾಡುವ ಮೂಲಕ ಉದ್ಯೋಗದಾತರಾಗುವ ಮನೋಭಾವ ಹೊಂದಬೇಕು ಎಂದರು.
ಸ್ವ ಉದ್ಯೋಗ ಮಾಡುವವರಿಗೆ ಸರ್ಕಾರ ಸಹಾಯಧನ, ಸಾಲ ಸೌಲಭ್ಯಗಳು ನೀಡುತ್ತಿದೆ. ಜೊತೆಗೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಎಲ್ಲಾ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದರು.
ಸAಪನ್ಮೂಲ ವ್ಯಕ್ತಿ ಕೃಷ್ಣಮೂರ್ತಿ ಮಾತನಾಡಿ, ಸ್ವಂತ ಉದ್ಯಮ ಅಥವಾ ಕೈಗಾರಿಕೆಗಳನ್ನು ಪ್ರಾರಂಭಿಸಲು ಅಗತ್ಯವಿರುವ ಮೂಲಭೂತ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಉದ್ದೇಶದಿಂದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಪುಟ್ಟರಾಜು ಅಧ್ಯಕ್ಷತೆ ವಹಿಸಿ ಮಾತನಾಡಿ, ಉದ್ಯಮಿಗಳಾಗಿ, ತಮ್ಮ ಮೂಲಕ ಉದ್ಯೋಗ ನೀಡುವವರಾಗಿ ಎಂಬ ಆಶಯದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ, ಈ ಕಾರ್ಯಾಗಾರವನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
ಈ ಸಂದರ್ಭ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಮಧುಶ್ರೀ, ಡಾ.ಕುಮಾರ್, ಪ್ರೊ.ಕುಸುಮ ಮತ್ತು ಸಿಡಾಕ್ ಅಧಿಕಾರಿ ಮಿಥುನ್ ಕುಮಾರ್ ಪಾಲ್ಗೊಂಡಿದ್ದರು. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.