ಸೋಮವಾರಪೇಟೆ,ಸೆ.೭: ಆಧುನಿಕ ಯುಗದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಬೇಕಾದ ಬದುಕಿನ ಶಿಕ್ಷಣವನ್ನು ಶಿಕ್ಷಕರು ಮಕ್ಕಳಿಗೆ ನೀಡಬೇಕು. ಆ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.
ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ದಿ ನಿಧಿ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಆಧುನಿಕ ತಂತ್ರಜ್ಞಾನ ಬೇಕು. ಇದಕ್ಕೆ ಪೂರಕವಾಗಿ ಮುಂದಿನ ದಿನಗಳಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಟ್ಯಾಬ್ ನೀಡುವ ಮೂಲಕ ಇನ್ನಷ್ಟು ಪರಿಣಾಮಕಾರಿ ಭೋದನೆ ದೊರಕಲಿ ಎಂಬ ಚಿಂತನೆ ನಡೆಸಲಾಗಿದೆ. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪ್ರೀತಿ ವಿಶ್ವಾಸ ಹಾಗೂ ಅವರಲ್ಲಿ ಸಂತಸದ ಕಲಿಕೆಗೆ ಪ್ರೇರೇಪಿಸಲು ವಿಶೇಷ ಗಮನ ಹರಿಸಬೇಕು.
ನಿವೃತ್ತಿ ಜೀವನದ ಸಂದ್ಯಾಕಾಲದಲ್ಲಿ ಶಿಕ್ಷಕರು ಮತ್ತು ಸರಕಾರಿ ನೌಕರರ ಬಹಳ ದಿನಗಳ ಬೇಡಿಕೆಯಾಗಿರುವ ಹಳೆ ಪಿಂಚಣಿ ಪದ್ದತಿಯನ್ನು ಜಾರಿಗೊಳಿಸಲು ರಾಜ್ಯ ಸರಕಾರ ಬದ್ದವಾಗಿದೆ. ಇದರ ಬಗ್ಗೆ ಶೀಘ್ರ ಆದೇಶ ಹೊರಬೀಳಲಿದೆ ಎಂದ ಅವರು, ಸೋಮವಾರಪೇಟೆಯಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶತಮಾನೋತ್ಸವ ಭವನವನ್ನು ೨ಕೋಟಿ ರೂ.ವೆಚ್ಚದಲ್ಲಿ ದುರಸ್ತಿ ಪಡಿಸಲಾಗುವುದು ಎಂದರು.
ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಹಳೆಬೀಡು ಎಸ್.ಜಿ.ಆರ್. ಪದವಿಪೂರ್ವ ಕಾಲೇಜಿನ ಅರ್ಥಶಾಸ್ತç ಉಪನ್ಯಾಸಕ ಜಿ.ಎನ್.ಸಿದ್ದೇಶ್ ಮಾತನಾಡಿ, ಇಂದು ಸ್ವಾಸ್ಥö್ಯ ಸಮಾಜ ನಿರ್ಮಾಣವಾಗಬೇಕಾದರೆ ಉತ್ತಮ ಮೌಲ್ಯಗಳಿಂದ ಮಾತ್ರ ಸಾಧ್ಯ. ಶಿಕ್ಷಕರು ಮೌಲ್ಯಯುತ ಶಿಕ್ಷಣ ನೀಡಿದರೆ ಮಾತ್ರ ಮಕ್ಕಳು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಸಾಧ್ಯ. ಶಿಕ್ಷಕನಾದವನಿಗೆ ಸಂವೇದನಾಶೀಲತೆ, ಸಮಯಪಾಲನೆ, ವಸ್ತçಸಂಹಿತೆ ಅಗತ್ಯ. ಇದರೊಂದಿಗೆ ಸಹನೆ ಮತ್ತು ತಾಳ್ಮೆಯೂ ಮುಖ್ಯ. ನಕಾರಾತ್ಮಕ ಚಿಂತನೆಗಳನ್ನು ದೂರವಿರಿಸಿ ಸಕಾರಾತ್ಮಕವಾಗಿ ಮಕ್ಕಳ ಬೆಳವಣಿಗೆಯತ್ತ ಗಮನಹರಿಸಬೇಕೆಂದು ಕಿವಿಮಾತು ಹೇಳಿದರು.
ವೇದಿಕೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾAತರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್, ಸಹ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ರತ್ನಕುಮಾರ್, ಶಿಕ್ಷಕರ ಸಂಘದ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು.