ಕೊಡ್ಲಿಪೇಟೆ, ಸೆ. ೮: ಸಮೀಪದ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ೧೪ ವರ್ಷದೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಆತಿಥೇಯ ಶಾಲೆ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಕ್ರೀಡಾಕೂಟದಲ್ಲಿ ಒಟ್ಟು ೯ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ಕ್ರೀಡಾ ವಿಭಾಗಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಶಾಲೆಯ ಉಪಾಧ್ಯಕ್ಷ ಡಿ.ಎಸ್. ವಿಶ್ವನಾಥ್, ಕಾರ್ಯದರ್ಶಿ ದಿವಾಕರ್ ಹೆಚ್.ಎಂ., ಕೊಡ್ಲಿಪೇಟೆ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ರವೀಶ್, ಬೆಸೂರು ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ಮುರಳೀಧರ್, ಮುಖ್ಯ ಶಿಕ್ಷಕ ಅಭಿಲಾಷ್ ಹೆಚ್.ಎಂ., ದೈಹಿಕ ಶಿಕ್ಷಣ ಶಿಕ್ಷಕ ಪುನೀತ್, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾ ಕಾರ್ಯದರ್ಶಿ ಆಶಾ ಮತ್ತು ಪ್ರೌಢಶಾಲೆಗಳ ಕ್ರೀಡಾ ಕಾರ್ಯದರ್ಶಿ ಸುನಿಲ್ ಉಪಸ್ಥಿತರಿದ್ದರು.

ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಸಮಗ್ರ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು, ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದರು.