ಹೆಬ್ಬಾಲೆ, ಸೆ. ೮: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ-ಸೋಮವಾರಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಬೆಸೂರು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ ನಡೆಯಿತು.
ಬೆಸೂರು ಕ್ಲಸ್ಟರ್ ಹಾಗೂ ಕೊಡ್ಲಿಪೇಟೆ ವಲಯ ವ್ಯಾಪ್ತಿಯ ಏಳು ಪ್ರೌಢಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರಿಗೆ ವಾಲಿಬಾಲ್, ಕಬಡ್ಡಿ, ಥ್ರೋಬಾಲ್, ಖೋ ಖೋ ಪಂದ್ಯಾಟಗಳು ನಡೆದವು.ಕ್ರೀಡಾಪಟುಗಳು ವಿವಿಧ ಪಂದ್ಯಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು.
ಬೆಸೂರು ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಧರ್ಮಪ್ಪ ಅವರು ವಾಲಿಬಾಲ್ ಸರ್ವೀಸ್ ಮಾಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡಾ ಮನೋಭಾವ ಮೈಗೂಡಿಸಿಕೊಳ್ಳಬೇಕು. ಸ್ಪರ್ಧಾ ಮನೋಭಾವದಿಂದ ಪಂದ್ಯಾವಳಿಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದರು.
ಸೋಮವಾರಪೇಟೆ ಭೂ ನ್ಯಾಯ ಮಂಡಳಿ ಸದಸ್ಯ ಜನಾರ್ದನ್ ಅವರು ಬಾಲಕಿಯರ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಕ್ರೀಡಾಳುಗಳಿಗೆ ಶುಭ ಹಾರೈಸಿದರು.
ಬೆಸೂರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಎಸ್.ಎಸ್ ಮಂಜುಳಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಬೆಸೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಕಮಲಮ್ಮ, ಪ್ರೌಢಶಾಲೆ ಮುಖ್ಯ ಶಿಕ್ಷಕ ಡಿ.ಎಸ್ ದೇವರಾಜು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಎಸ್.ಎನ್.ಮುರುಳೀಧರ್, ಆರ್.ಎಸ್.ರವೀಶ್, ಶಿಕ್ಷಕರ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಸುರೇಶ್, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಪಿ ಶಿವಕುಮಾರಿ, ಹಂಡ್ಲಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಂ.ಎಚ್.ಹರೀಶ್, ಕೊಡ್ಲಿಪೇಟೆ ಪದವಿ ಪೂರ್ವಕಾಲೇಜು ಪ್ರೌಢಶಾಲೆ ವಿಭಾಗದ ಮುಖ್ಯ ಶಿಕ್ಷಕ ಚಂದ್ರಶೇಖರ್ ಅಡ್ಮನಿ, ಕೊಡ್ಲಿಪೇಟೆ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸಂಧ್ಯಾ, ದೈಹಿಕ ಶಿಕ್ಷಣ ಶಿಕ್ಷಕರಾದ ಎ.ಪಿ.ಸುನೀಲ್, ಆದರ್ಶ, ರಾಜೇಶ್, ಶಶಾಂಕ್, ದ್ಯಾನ್, ಶಿಕ್ಷಕರಾದ ಪುಟ್ಟರಂಗನಾಥ್, ಬಿ.ವಿ.ಸುಮ, ಕಿರಣ್ ಕುಮಾರ್ ಹಾಗೂ ಮುಖಂಡರಾದ ಪ್ರಸನ್ನ ಮತ್ತಿತರರು ಪಾಲ್ಗೊಂಡಿದ್ದರು.