ಸಿದ್ದಾಪುರ, ಸೆ. ೯: ನೆಲ್ಲಿಹುದಿಕೇರಿಯಿಂದ ಅಭ್ಯತ್‌ಮಂಗಲ ಗ್ರಾಮದ ಒಂಟಿಯAಗಡಿವರೆಗೆ ರೂ. ೩ ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಸರ್ಕಾರ ಈಗಾಗಲೇ ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದು, ವಿವಿಧ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ನೆಲ್ಲಿಹುದಿಕೇರಿ ಹಾಗೂ ವಾಲ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಸುಮಾರು ೫ ಕೋಟಿಗೂ ಅಧಿಕ ಅನುದಾನದಲ್ಲಿ ರಸ್ತೆ, ಕಿರುಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿವೆ ಎಂದು ತಿಳಿಸಿದರು.

ಇದೀಗ ನೆಲ್ಲಿಹುದಿಕೇರಿ ಗ್ರಾಮದಿಂದ ಅಭ್ಯತ್‌ಮಂಗಲ ಗ್ರಾಮದ ಒಂಟಿಯAಗಡಿವರೆಗೆ ೩ ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮಸ್ಥರು ಕೂಡ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಗಮನಕ್ಕೆ ತರಬೇಕು ಎಂದು ಶಾಸಕರು ಹೇಳಿದರು.

ನೆಲ್ಲಿಹುದಿಕೇರಿ ಗ್ರಾಮದ ಕಾಂಗ್ರೆಸ್ ಮುಖಂಡ ಷಂಶುದ್ದೀನ್ ಮಾತನಾಡಿ, ನೆಲ್ಲಿಹುದಿಕೇರಿ ಹಾಗೂ ಅಭ್ಯತ್‌ಮಂಗಲ ಗ್ರಾಮಗಳ ಹದಗೆಟ್ಟ ರಸ್ತೆಗಳಿಗೆ ಶಾಸಕರು ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿಪಡಿಸಿರುವುದರಿಂದ ಇದೀಗ ವಾಹನ ಸಂಚಾರ ಸುಗಮವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುನೀತಾ ಮಂಜುನಾಥ್, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಾದ ಬಶೀರ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಉಪಸ್ಥಿತರಿದ್ದರು.