ಕೂಡಿಗೆ, ಸೆ. ೧೦: ಕರ್ನಾಟಕ ರಾಜ್ಯ ಜೀವನೋಪಾಯ ಸಂರ್ವಧನಾ ಸಂಸ್ಥೆ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ, ಸಂಜೀವಿನಿ ಒಕ್ಕೂಟ ಹಾಗೂ ಕೂಡಿಗೆ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಕೂಡಿಗೆ ಗ್ರಾಮ ಪಂಚಾಯಿತಿ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ದೂರದೃಷ್ಟಿ ಯೋಜನೆಯ ತರಬೇತಿ ಕಾರ್ಯಾಗಾರ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಕಲ್ಪನಾ ವಹಿಸಿ ಮಾತನಾಡಿ, ಒಕ್ಕೂಟದ ಸದಸ್ಯರಿಗೆ ತರಬೇತಿ ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡು ಆರ್ಥಿಕವಾಗಿ ಮುಂದುವರಿಯಲು ಮತ್ತು ವಿವಿಧ ಸಾಲ ಸೌಲಭ್ಯಗಳನ್ನು ಪಡೆದು ಸ್ವ ಉದ್ಯೋಗಿಗಳಾಗಲು ಸಾಧ್ಯ ಎಂದರು.
ತರಬೇತಿ ಕಾರ್ಯಾಗಾರದಲ್ಲಿ ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣೆಯ ಅಧಿಕಾರಿ ವರ್ಗದವರು, ಕುಶಾಲನಗರ ರೈತ ಸಂಪರ್ಕ ಕೇಂದ್ರ ಅಧಿಕಾರಿ ವರ್ಗದವರು ತಮ್ಮ ತಮ್ಮ ಇಲಾಖೆಗಳ ಯೋಜನೆಗಳ ಬಗ್ಗೆ ವಿವರಿಸಿದರು.
ಈ ಸಂದರ್ಭ ಸಂಜೀವಿನಿ ಒಕ್ಕೂಟದ ಆಡಳಿತ ಮಂಡಳಿ ಮತ್ತು ಸದಸ್ಯರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿ ವರ್ಗದವರು ಹಾಜರಿದ್ದರು.