ಗುಡ್ಡೆಹೊಸೂರು ಸೆ. ೧೦: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡಿನಿಂದ ರಂಗಸಮುದ್ರ ಗ್ರಾಮ ಗಡಿವರೆಗೆ ರೂ. ೨.೫೦ ಕೋಟಿ ವೆಚ್ಚದಲ್ಲಿ ಹೆದ್ದಾರಿ ಅಭಿವೃದ್ದಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ ಮೂಲಕ ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿ ೯೧ ರಲ್ಲಿ ಕೈಗೊಂಡಿರುವ ಕಾಂಕ್ರಿಟ್ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸಿ ಮುಕ್ತಾಯಗೊಳಿಸಲು ಶಾಸಕರು ಅಭಿಯಂತರರು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.
ಈ ಪ್ರದೇಶ ಶಿಥಿಲ ವಾತಾವರಣದಲ್ಲಿ ಇರುವ ಕಾರಣ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಎಚ್ಚರವಹಿಸಿ ಗುಣಮಟ್ಟದಲ್ಲಿ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿದರು. ಸ್ಥಳೀಯ ಮುಖಂಡ ನಂಗಾರು ಜಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕರ ಮೂಲಕ ನಡೆದ ಅಭಿವೃದ್ಧಿ ಕಾಮಗಾರಿ, ಯೋಜನೆಗಳ ಬಗ್ಗೆ ವಿವರ ನೀಡಿದರು.
ಇದೇ ಸಂದರ್ಭ ಸ್ಥಳೀಯರು ತಮ್ಮ ಸಮಸ್ಯೆ, ಅಹವಾಲುಗಳನ್ನು ಶಾಸಕರಿಗೆ ಸಲ್ಲಿಸಿದರು. ಈ ಸಂದರ್ಭ ಪ್ರಮುಖರಾದ ಚಂದ್ರಶೇಖರ್, ಸುನಿತಾ ಮಂಜುನಾಥ್, ಲೋಕೋಪಯೋಗಿ ಇಲಾಖೆ ಅಭಿಯಂತರ ಅರ್ಬಾಜ್ ಅಹಮ್ಮದ್, ಗುಡ್ಡೆಹೊಸೂರು ಗ್ರಾಪಂ ಪಿಡಿಓ ಸುಮೇಶ್ ಮತ್ತಿತರರು ಇದ್ದರು.