ಬೆಂಗಳೂರು, ಸೆ. ೧೦: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಶಿಕ್ಷಕರ ಘಟಕದ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರಿನಲ್ಲಿ ನೀಡಲಾಗುವ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಯನ್ನು ಕೊಡಗಿನ ಐವರು ಶಿಕ್ಷಕರಿಗೆ ಪ್ರದಾನ ಮಾಡಲಾಯಿತು.

ಬೆಂಗಳೂರಿನ ಕ್ಲೀನ್ಸ್ ರಸ್ತೆಯಲ್ಲಿರುವ ಭಾರತ್ ಜೋಡೋ ಭವನದಲ್ಲಿ ಸೆಪ್ಟೆಂಬರ್ ೫ ರಂದು ನಡೆದ ಶಿಕ್ಷಕರ ದಿನಾಚರಣೆ ಹಾಗೂ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಡಿಕೇರಿ ತಾಲೂಕಿನ ಚೆಟ್ಟಳ್ಳಿ ಅನುದಾನಿತ ಪ್ರೌಢಶಾಲೆಯ ಸಹಶಿಕ್ಷಕ ಜಿ.ಸಿ. ಸತ್ಯನಾರಾಯಣ, ಕುಶಾಲನಗರ ತಾಲೂಕಿನ ಕೂಡುಂಗಳೂರು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ದಯಾನಂದ ಪ್ರಕಾಶ್ ಎಂ.ಟಿ, ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಉದಯ ಎಸ್.ಕೆ, ಮಡಿಕೇರಿ ತಾಲೂಕಿನ ಚೇರಂಬಾಣೆಯ ಅರುಣ ಅನುದಾನಿತ ಪ್ರೌಢಶಾಲೆಯ ಮುಖ್ಯಶಿಕ್ಷಕ ಲೋಕೇಶ್ ಸಿ.ಆರ್ ಹಾಗೂ ಕುಶಾಲನಗರ ತಾಲೂಕಿನ ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ತಾರಾಮಣಿ ಜಿ.ಆರ್. ಅವರನ್ನು ಸನ್ಮಾನಿಸಿ ಗೌರವಿಸ ಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಶಿಕ್ಷಕರನ್ನು ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಅಭಿನಂದಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ಹಾಗೂ ಶಿಕ್ಷಕರ ಘಟಕದ ಪದಾಧಿಕಾರಿಗಳು, ಪಕ್ಷದ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.