ಚೆಯ್ಯಂಡಾಣೆ, ಸೆ. ೧೧: ವೀರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರಿಗೆ ಸನ್ಮಾನ ಕಾರ್ಯಕ್ರಮ ಅಮ್ಮತ್ತಿಯ ಖಾಸಗಿ ರೆಸಾರ್ಟ್ನಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ, ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳು ಮೂರು ವರ್ಷಗಳಿಂದ ಯಾವುದೇ ಅಡಚಣೆಯಿಲ್ಲದೆ ಅನುಷ್ಠಾನಗೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ ಎಂದರು.

ಪ್ರತಿ ವರ್ಷ ಸುಮಾರು ೫೦ ಸಾವಿರ ಕೋಟಿ ವೆಚ್ಚ ಗ್ಯಾರಂಟಿ ಯೋಜನೆಗಳಿಗೆ ತಗುಲುತ್ತಿದ್ದು, ಸಾಮಾಜಿಕ ಭದ್ರತಾ ಕಾರ್ಯಕ್ರಮವನ್ನು ಸರ್ಕಾರ ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ತೊಡಗಿಸಿಕೊಂಡಿರುವ ಎಲ್ಲರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ವಸತಿ ರಹಿತರಿಗೆ ಭೂಮಿ ಒದಗಿಸುವ ಭೂ ಗ್ಯಾರಂಟಿ ಯೋಜನೆಯನ್ನು ಆರನೇ ಗ್ಯಾರಂಟಿಯಾಗಿ ಜಾರಿಗೊಳಿಸುವ ಕುರಿತು ಸರ್ಕಾರದ ಚಿಂತನೆ ಇದೆ. ಪ್ರತಿ ತಾಲೂಕಿನಲ್ಲಿ ಜಾಗ ಗುರುತಿಸಿ ಅರ್ಹ ಬಡವರಿಗೆ ಹಂಚುವ ಉದ್ದೇಶವಿದೆ ಎಂದು ತಿಳಿಸಿದರು.

ವೀರಾಜಪೇಟೆ ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಶೇ ೯೯ ಗುರಿ ಸಾಧಿಸಿರುವುದಕ್ಕೆ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಶ್ಲಾಘಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪಿ.ವಿ.ಜಾನ್ಸನ್ ಮಾತನಾಡಿ, ಮುಂದಿನ ದಿನಗಳಲ್ಲಿ ಸಿದ್ದಾಪುರ ಭಾಗದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಬೃಹತ್ ಸಮಾವೇಶ ಆಯೋಜಿಸಲು ಶಾಸಕ ಎ.ಎಸ್.ಪೊನ್ನಣ್ಣ ಅವರ ಸಹಕಾರ ಕೋರಿದರು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸಿ.ಎ. ನಾಸರ್ ಹಾಗೂ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.