ಕುಶಾಲನಗರ, ಸೆ. ೧೨: ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಜಿಲ್ಲಾಡಳಿತ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ತಂಡದ ಕಾರ್ಯಚಟುವಟಿಕೆಗಳು ಯಶಸ್ವಿಯಾಗಿ ನಡೆಯುತ್ತಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ಅನನ್ಯ ವಾಸುದೇವ್ ಹೇಳಿದರು.

ಕುಶಾಲನಗರದ ಸ್ಥಳೀಯ ಎಪಿಸಿಎಂಎಸ್ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಆಯೋಜಿಸಿದ್ದ ಶೌರ್ಯ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಸ್ವಯಂಸೇವಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಎರಡು ವರ್ಷಗಳಿಂದ ಮಳೆಗಾಲ ಆರಂಭಕ್ಕೂ ಮುನ್ನ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಯಾವುದೇ ರೀತಿಯ ಅನಾಹುತ ಸಂಭವಿಸದAತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆಕಸ್ಮಿಕ ಘಟನೆಗಳು ಸಂಭವಿಸಿದ ಸಂದರ್ಭದಲ್ಲಿ ಪ್ರತಿಯೊಬ್ಬ ನಾಗರಿಕರೂ ಅಪಾಯಕ್ಕೆ ಸಿಲುಕದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದರು.

ಈ ನಿಟ್ಟಿನಲ್ಲಿ ಶೌರ್ಯ ತಂಡದ ಸದಸ್ಯರು ತಮ್ಮ ಕಾರ್ಯಚಟುವಟಿಕೆಗಳ ಜೊತೆಗೆ ಸಾರ್ವಜನಿಕರಲ್ಲಿ ಪ್ರಾಕೃತಿಕ ವಿಕೋಪಗಳ ಕುರಿತು ಅರಿವು ಮೂಡಿಸಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಕಾರ್ಯವೈಖರಿ ಶ್ಲಾಘನೀಯವಾಗಿದೆ ಎಂದು ಅನನ್ಯ ವಾಸುದೇವ್ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಎನ್‌ಡಿಆರ್‌ಎಫ್ ವಿಜಯವಾಡ ಬೆಟಾಲಿಯನ್ ಅಧಿಕಾರಿ ಶಾಂತಿಲಾಲ್ ಜಟಿಯ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಕಾರ್ಯವೈಖರಿ ಹಾಗೂ ವಿಪತ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ರಕ್ಷಣಾ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಠ್ಠಲ್ ಎಸ್. ಸಾಲಿಯಾನ್ ಮಾತನಾಡಿ, ಶೌರ್ಯ ತಂಡದ ಸದಸ್ಯರು ಸದಾ ಚಟುವಟಿಕೆಯಿಂದ ಇರಬೇಕು. ಪ್ರಾಕೃತಿಕ ವಿಕೋಪ ಸಂಭವಿಸಿದ ಸಂದರ್ಭದಲ್ಲಿ ಸರ್ಕಾರಿ ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸುವ ಮುನ್ನವೇ ಸ್ಥಳೀಯ ಶೌರ್ಯ ತಂಡಗಳು ಧಾವಿಸಿ, ಅಗತ್ಯ ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಸ್ವಯAಸೇವಕರು ಕಾಲಕಾಲಕ್ಕೆ ಅಗತ್ಯ ತರಬೇತಿ ಪಡೆದುಕೊಳ್ಳುವ ಮೂಲಕ ವಿಪತ್ತು ನಿರ್ವಹಣೆ ಹಾಗೂ ರಕ್ಷಣಾ ಕಾರ್ಯಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಜನಜಾಗೃತಿ ವೇದಿಕೆಯ ನಿಕಟಪೂರ್ವ ಉಪಾಧ್ಯಕ್ಷ ಎಂ.ಎನ್. ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ ಪಟಗಾರ, ಸೋಮವಾರಪೇಟೆ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಶೌರ್ಯ ತಂಡದ ತಾಲೂಕು ಪ್ರಮುಖರಾದ ರಾಮದಾಸ್, ಯಶೋಧ, ದಿವ್ಯ, ದಿನೇಶ್, ತೀರ್ಥಕುಮಾರ್, ರೇಖಾ ಗಣೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ೨೦೦ಕ್ಕೂ ಅಧಿಕ ಸ್ವಯಂಸೇವಕರಿಗೆ ವಿಪತ್ತು ನಿರ್ವಹಣೆ ಹಾಗೂ ರಕ್ಷಣಾ ಕಾರ್ಯದ ಕುರಿತು ತರಬೇತಿ ನೀಡಲಾಯಿತು. ಯೋಜನಾಧಿಕಾರಿ ಹನುಮಂತ ಅಂಗಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜನಜಾಗೃತಿ ವೇದಿಕೆಯ ಮೇಲ್ವಿಚಾರಕ ಜಿತೇಶ್ ವಂದಿಸಿದರು.