ಶನಿವಾರಸAತೆ, ಸೆ. ೧೫: ಪಟ್ಟಣದ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಮೈದಾನದಲ್ಲಿ ಸೋಮವಾರಪೇಟೆ ತಾಲೂಕು ಮಟ್ಟದ ೧೪ ಹಾಗೂ ೧೭ ವರ್ಷ ವಯೋಮಿತಿಯೊಳಗಿನ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು. ತಾಲೂಕಿನ ವಿವಿಧ ಶಾಲೆಗಳ ಕ್ರೀಡಾ ತಂಡಗಳು ಭಾಗವಹಿಸಿದ್ದವು.

ಕಾರ್ಯಕ್ರಮದ ನೇತೃತ್ವವನ್ನು ವಿದ್ಯಾಸಂಸ್ಥೆಯ ಪ್ರಾಂಶುಪಾಲ ರೆವರೆಂಡ್ ಫಾದರ್ ಜಿ.ಬಿ. ಥಾಮಸ್ ವಹಿಸಿದ್ದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸೂಫಿ ಪೆರಾಜೆ, ಶಾಲಾ ಆಡಳಿತಾಧಿಕಾರಿ ರೆವರೆಂಡ್ ಫಾದರ್ ಜೇಮ್ಸ್, ಸಿಆರ್‌ಪಿ ಸಿ.ಕೆ. ದಿನೇಶ್ ಸೇರಿದಂತೆ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.

ಕ್ರೀಡಾಕೂಟವು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಿ.ಎಸ್. ಗಿರೀಶ್, ರಾಜೇಶ್ ಹಾಗೂ ರಂಜಿತ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಸೇಕ್ರೆಡ್ ಹಾರ್ಟ್ ಶಾಲೆಯ ಶಿಕ್ಷಕರೊಂದಿಗೆ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಸಹಕಾರ ನೀಡಿದರು.

೧೭ ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ ಕುಶಾಲನಗರದ ಮೂಕಾಂಬಿಕಾ ಪ್ರೌಢಶಾಲೆ ಪ್ರಥಮ ಹಾಗೂ ಆಲೂರುಸಿದ್ದಾಪುರದ ಮುರಾರ್ಜಿ ದೇಸಾಯಿ ವಸತಿ ಶಾಲೆ ದ್ವಿತೀಯ ಸ್ಥಾನ ಗಳಿಸಿತು. ಬಾಲಕಿಯರ ವಿಭಾಗದಲ್ಲಿ ಆಲೂರುಸಿದ್ದಾಪುರ ಸರ್ಕಾರಿ ಪ್ರೌಢಶಾಲೆ ಪ್ರಥಮ ಹಾಗೂ ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ದ್ವಿತೀಯ ಸ್ಥಾನ ಪಡೆದುಕೊಂಡಿತು.

೧೪ ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ ಕೂಡಿಗೆಯ ಜ್ಞಾನೋದಯ ಶಾಲೆ ಪ್ರಥಮ ಹಾಗೂ ಆಲೂರುಸಿದ್ದಾಪುರ ಸರ್ಕಾರಿ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಗಳಿಸಿತು.

ಬಾಲಕಿಯರ ವಿಭಾಗದಲ್ಲಿ ಕುಶಾಲನಗರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಥಮ ಹಾಗೂ ಹಂಡ್ಲಿ ಸರ್ಕಾರಿ ಪ್ರೌಢಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡವು.